ಸಿರುಗುಪ್ಪ: ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಬಿಜೆಪಿ ಪಕ್ಷದ ವತಿಯಿಂದ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಡಿ.ಕೆ.ಶಿ ರಾಜಿನಾಮಗೆ ಒತ್ತಾಯಿಸಿದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದಮಾಜಿ ಶಾಸಕ ಎಮ್.ಎಸ್.ಸೋಮಲಿಂಗಪ್ಪ ಅವರು ಸಂವಿಧಾನದ ಕಾನೂನಿನಡಿ ಉಪ ಮುಖ್ಯಮಂತ್ರಿಯಾಗಿದ್ದು, ಇಂತಹ ಹೇಳಿಕೆಯನ್ನು ನೀಡಿರುವುದು ದುರ್ದೈವದ ಸಂಗತಿಯಾಗಿದೆ. ಆದ್ದರಿಂದ ರಾಜ್ಯಾದ್ಯಂತ ಬಿಜೆಪಿ ಪಕ್ಷದಿಂದ ಖಂಡಿಸುತ್ತಾ ರಾಜಿನಾಮೆ ಪಡೆಯಲು ಆಗ್ರಹಿಸಲಾಗುತ್ತಿದೆಂದರು.
ಬಿಜೆಪಿ ಪಕ್ಷದ ತಾಲೂಕಾಧ್ಯಕ್ಷ ಕುಂಟ್ನಾಳ್ ಮಲ್ಲಿಕಾರ್ಜುನ ಸ್ವಾಮಿ ಮಾತನಾಡಿ ರಾಜ್ಯದ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಸಂವಿಧಾನ ಬದಲಾವಣೆ ಹೇಳಿಕೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಸರ್ಕಾರ ಈ ಕೂಡಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ರಾಜಿನಾಮೆ ಪಡೆಯಬೇಕೆಂದು ಒತ್ತಾಯಿಸಿದರು.
ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ ಎಮ್.ಎಸ್.ಸಿದ್ದಪ್ಪ ಅವರು ಮಾತನಾಡಿ ರಾಜ್ಯದಲ್ಲಿ ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಉಪ ಮುಖ್ಯಮಂತ್ರಿಗಳಾಗಿರುವ ಡಿ.ಕೆ.ಶಿವಕುಮಾರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ಬರೆದಿರುವ ಜಗತ್ಪ್ರಸಿದ್ದ ಸಂವಿಧಾನವನ್ನು ಬದಲಾವಣೆ ಹೇಳಿಕೆಯನ್ನು ಖಂಡಿಸಲು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಆದಕಾರಣ ತಕ್ಷಣವೇ ಎ.ಐ.ಸಿ.ಸಿ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಅವರು ಡಿ.ಕೆ.ಶಿವಕುಮಾರ್ ಅವರ ರಾಜಿನಾಮೆಯನ್ನು ಪಡೆಯಬೇಕೆಂದು ಆಗ್ರಹಿಸಿದರು. ಇದೇ ವೇಳೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು ಇದ್ದರು.
ವರದಿ : ಶ್ರೀನಿವಾಸ ನಾಯ್ಕ