ಕೊಪ್ಪಳ: ಕೊಪ್ಪಳ ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕಟ್ ಆಗಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇನ್ನೊಂದೆಡೆ ಮುರಿದು ಬಿದ್ದಿರುವ ಗೇಟ್ ಮೇಲಿನ ಒತ್ತಡ ಕಡಿಮೆ ಮಾಡಲು ಹೆಚ್ಚಿನ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ.
ಜಲಾಶಯದಿಂದ ಇಂದು ಕೂಡ 1.5 ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಶುರುವಾಗಿದ್ದು, ಕಟ್ಟೆಚ್ಚರ ವಹಿಸುವಂತೆ ಘೋಷಿಸಲಾಗಿದೆ.
ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾಂನಲ್ಲಿರುವ ನೀರಿನ ಪ್ರಮಾಣ ತಗ್ಗಿಸುವ ಅನಿವಾರ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ತುಂಗಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಗ್ರಾಮಸ್ಥರಿಗೆ ನದಿ ಬಳಿ ತೆರಳದಂತೆ ಹಾಗೂ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗುತ್ತಿದೆ.
ತುಂಗಭದ್ರಾ ಡ್ಯಾಂ ನ ಕೆಳಭಾಗದ ಕೊಪ್ಪಳ, ಗಂಗಾವತಿ, ಕಾರಟಗಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಡಂಗುರ ಸಾರಿ ಗ್ರಾಮಸ್ಥರಿಗೆ ಕಟ್ಟೆಚ್ಚರ ಘೋಷಿಸಲಾಗಿದೆ. ತುಂಗಭದ್ರಾ ಡ್ಯಾಂ ಸುತ್ತಮುತ್ತಲ ಪ್ರದೇಶಕ್ಕೆ ಜನರ ಸಂಚಾರ ನಿಷೇಧಿಸಲಾಗಿದೆ.