ತುರುವೇಕೆರೆ: ಬೀದರ್ ಶ್ರೀರಂಗಪಟ್ಟಣದ ರಾಷ್ಟ್ರೀಯ ಹೆದ್ದಾರಿ 150ಎ ಅಭಿವೃದ್ದಿಗೆ ಕೇಂದ್ರ ಸರ್ಕಾರ 2014 ರಿಂದ ಈವರೆಗೆ 6524 ಕೋಟಿ ರೂ ಅನುಮೋದನೆ ನೀಡಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ತುರುವೇಕೆರೆ, ತಿಪಟೂರು ತಾಲ್ಲೂಕಿನ ಗಡಿಭಾಗವಾದ ಕುಂದೂರು ಬಳಿ ರಾಷ್ಟ್ರೀಯ ಹೆದ್ದಾರಿ 150 ಎ ನ 42.236 ಕಿಲೋಮೀಟರ್ ಉದ್ದದ ರಸ್ತೆ ಅಭಿವೃದ್ದಿಗೆ ಸುಮಾರು 617.28 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ಈವರೆಗೆ ಬೀದರ್ ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 6524 ಕೋಟಿ ರೂ ಅನುದಾನ ಒದಗಿಸಿದೆ. ಈಗಾಗಲೇ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ 2024 ರ ಮಾರ್ಚ್ ತಿಂಗಳಲ್ಲಿ ಮೈಸೂರಿನಲ್ಲಿ ಈ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದ್ದಾರೆ ಎಂದರು.
2024-25 ನೇ ಸಾಲಿನಲ್ಲಿ 734.26 ಕೋಟಿ ಮೊತ್ತದ 43.20 ಕಿಲೋಮಿಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿಪಡಿಸಲು 4 ಕಾಮಗಾರಿಗಳಿಗೆ ಅನುಮೋದನೆ ಪಡೆಯಲಾಗಿದೆ. ಶಿರಾ ಬಡವನಹಳ್ಳಿ ಭಾಗದ ಚತುಷ್ಪಥ ಹಾಗೂ ತುಮಕೂರಿನ ಬಟವಾಡಿಯಿಂದ ಮಲ್ಲಸಂದ್ರವರೆಗೆ ಚತುಷ್ಪಥ ಅಭಿವೃದ್ದಿ ಕಾಮಗಾರಿ ಶೀಘ್ರವೇ ಕೈಗೊಳ್ಳಲಾಗುವುದು ಎಂದ ಅವರು, ಸರ್ಕಾರಕ್ಕೆ ತೆರಿಗೆ ರೂಪದಲ್ಲಿ ಬರುವ ಸಾರ್ವಜನಿಕರ ಹಣವನ್ನು ಅಭಿವೃದ್ದಿ ಕಾರ್ಯದ ಮೂಲಕ ಸಾರ್ವಜನಿಕರಿಗೆ ಸಮರ್ಪಿಸುವ ಕೆಲಸಕ್ಕೆ ಪ್ರಾಮಾಣಿಕವಾಗಿ ಒತ್ತು ನೀಡಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ 150 ಎ ರಾಜ್ಯದ ಉತ್ತರದ ಜೇವರ್ಗಿಯಿಂದ ಪ್ರಾರಂಭಗೊಂಡು ದಕ್ಷಿಣದ ಚಾಮರಾಜನಗರದಲ್ಲಿ ಅಂತ್ಯಗೊಳ್ಳುತ್ತದೆ. ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಚಾರದಲ್ಲಿ ಗುಣಮಟ್ಟದಲ್ಲಿ ಯಾವುದೇ ರಾಜಿ ಇಲ್ಲ. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟ ಸರಿಇಲ್ಲದಿದ್ದರೆ ಯಾವುದೇ ಮುಲಾಜಿಲ್ಲದೆ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಿ, ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ, ಮುಖಂಡ ಚೌದ್ರಿ ರಂಗಪ್ಪ, ತಹಸೀಲ್ದಾರ್ ಕುಂಇ ಅಹಮದ್, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಾದ ಧನರಾಜ್, ಶಿವಶಂಕರ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್




