ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರ್‌ನಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸುಮಾರು 7 ಜನ ಸಾವನ್ನಪ್ಪಿದ್ದಾರೆ. 30 ಮಂದಿ ಗಾಯಗೊಂಡಿದ್ದಾರೆ.
ಬೆಂಗಳೂರು-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಮೊಗಿಲಿ ಘಾಟ್‌ನಲ್ಲಿ ಎರಡು ಲಾರಿಗಳು ಮತ್ತು ಆಂಧ್ರಪ್ರದೇಶ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಎಪಿಎಸ್‌ಆರ್‌ಟಿಸಿ) ಬಸ್ ನಡುವೆ ಡಿಕ್ಕಿ ಸಂಭವಿಸಿದೆ.
ಅನೇಕರು ಗಂಭೀರವಾಗಿ ಗಾಯಗೊಂಡಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಘಟನೆಯ ಕಾರಣವನ್ನು ತನಿಖೆ ಮಾಡುತ್ತಿದ್ದಾರೆ.
ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಚಿತ್ತೂರು ಜಿಲ್ಲೆಯ ಮೊಗಲಿ ಘಾಟ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 7 ಜನರು ಸಾವನ್ನಪ್ಪಿದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಆರ್‌ಟಿಸಿ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಮುಖ್ಯಮಂತ್ರಿಗಳು ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ ಮತ್ತು ಸಂತ್ರಸ್ತರಿಗೆ ನೀಡುತ್ತಿರುವ ಪರಿಹಾರ ಕ್ರಮಗಳು ಮತ್ತು ವೈದ್ಯಕೀಯ ನೆರವಿನ ಬಗ್ಗೆ ವಿಚಾರಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಅಲ್ಲದೆ, ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.