ಬೆಂಗಳೂರು: ನಗರದ ಖಾಸಗಿ ಕಾಲೇಜಿನಲ್ಲಿ ಮಹಿಳೆಯರ ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟು ಚಿತ್ರೀಕರಣ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ವಿದ್ಯಾರ್ಥಿಯೊಬ್ಬನನ್ನು ಬಂಧಿಸಿದ್ದಾರೆ.
ಕುಶಾಲ್ ಎಂಬ ವಿದ್ಯಾರ್ಥಿಯೇ ಬಂಧಿತ ಆರೋಪಿ. ಈತ ತಾನು ವ್ಯಾಸಂಗ ಮಾಡುತ್ತಿದ್ದ ಕಾಲೇಜಿನ ಲೇಡೀಸ್ ಟಾಯ್ಲೆಟ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ.ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆತನನ್ನು ಬಂಧನ ಮಾಡುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದರು. ಈ ಹಿನ್ನೆಲೆ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.
ಈ ಘಟನೆ ಮೈಸೂರು ರಸ್ತೆಯ ಖಾಸಗಿ ಕಾಲೇಜಿನಲ್ಲಿ ನಡೆದಿದೆ. ಶೌಚಾಲಯದಲ್ಲಿ ಮೊಬೈಲ್ ಕ್ಯಾಮೆರಾ ಇಟ್ಟಿರುವುದನ್ನು ವಿದ್ಯಾರ್ಥಿನಿಯೊಬ್ಬಳು ಗಮನಿಸಿದ್ದಾಳೆ. ಗಾಬರಿಗೊಂಡ ಆಕೆ ಓಡಿ ಬಂದಿದ್ದಾಳೆ. ಈ ವೇಳೆ ಆರೋಪಿ ಕುಶಾಲ್‌ನನ್ನು ವಿದ್ಯಾರ್ಥಿಗಳು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.
ಬಳಿಕ ಆತನನ್ನು ಬಂಧನ ಮಾಡಬೇಕೆಂದು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿ ನಿಯಂತ್ರಿಸುವ ಪ್ರಯತ್ನ ಮಾಡಿದ್ದಾರೆ. ವಿಡಿಯೋ ಚಿತ್ರೀಕರಣ ಮಾಡಿದ್ದಾನೆ ಎನ್ನಲಾದ ಆರೋಪಿಯನ್ನು ಬಂಧಿಸಿದ್ದಾರೆ.
ಇನ್ನು ಬಂಧಿತ ವಿದ್ಯಾರ್ಥಿಯ ಮೊಬೈಲಿನಲ್ಲಿ ಸುಮಾರು 8 ಸಾವಿರ ವಿಡಿಯೋಗಳು ಇರುವುದು ಪತ್ತೆಯಾಗಿದೆ. ಆತ ಹಲವು ತಿಂಗಳುಗಳಿಂದ ಮಹಿಳೆಯರ ಶೌಚಾಲಯದಲ್ಲಿ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಎನ್ನಲಾಗಿದೆ.