ಬೆಳಗಾವಿ: ಈ ಬಾರಿಯ ಲೋಕಸಭಾ ಚುನಾವಣೆ ಎರಡನೇ ಸ್ವಾತಂತ್ರ್ಯ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ಗೆಲ್ಲಲಿದ್ದು ಬಿಜೆಪಿ 200 ಸ್ಥಾನ ಗೆಲ್ಲುವುದೂ ಕಷ್ಟವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಗೆ 400 ಸ್ಥಾನಗಳನ್ನು ನೀಡಿದರೆ ಸಂವಿಧಾನವನ್ನು ಬದಲಾವಣೆ ಮಾಡುವುದಾಗಿ ಬಿಜೆಪಿ ಹಾಗೂ ಆರ್ ಎಸ್ ಎಸ್ ಹೇಳುತ್ತಿದ್ದಾರೆ.
ಅಂಬೇಡ್ಕರ್ ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ, ಸಮಸಮಾಜ ನೀಡುತ್ತದೆ. ಇದಕ್ಕೆ ವಿರುದ್ದವಾಗಿ ಬಿಜೆಪಿಯವರು ನಡೆಯುತ್ತಿದ್ದಾರೆ.
ಅಂಬೇಡ್ಕರ್ ಅವರು ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಸಾಕಾಗುವುದಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ದೊರೆಯುವಂತಾಗಬೇಕು ಎಂದಿದ್ದಾರೆ. ಈ ಶಕ್ತಿಯನ್ನು ದುರ್ಬಲರಿಗೆ ತುಂಬವ ಸಲುವಾಗಿಯೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳನ್ನು ಜಾರಿ ಮಾಡಿದೆ ಎಂದರು.
ಬಿಜೆಪಿಯವರು ಮೊದಲು ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡರು. ಬಳಿಕ ಗ್ಯಾರಂಟಿಗಳನ್ನು ಜಾರಿ ಮಾಡಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎನ್ನುವ ಸುಳ್ಳು ಹರಡಿದರು.
ಅಭಿವೃದ್ಧಿ ಕೆಲಸಗಳು ನಿಲ್ಲುತ್ತವೆ ಎಂದರು, ಲೋಕಸಭಾ ಚುನಾವಣೆ ತನಕ ಮಾತ್ರ ನೀಡಿ, ನಂತರ ನಿಲ್ಲಿಸುತ್ತಾರೆ ಎಂಬ ಸುಳ್ಳುಗಳನ್ನು ಸೃಷ್ಟಿಸಿದ್ದಾರೆ.
ಬಜೆಟ್ ನಲ್ಲಿ ಗ್ಯಾರಂಟಿಗಳಿಗೆ 52009 ಕೋಟಿ ರೂ.ಗನ್ನು ಇಟ್ಟಿದ್ದೇವೆ. ಅಭಿವೃದ್ಧಿ ಕೆಲಸಗಳಿಗೆ 68 ಸಾವಿರ ಕೋಟಿಗಳನ್ನೂ ಸೇರಿದಂತೆ 2024-25 ರಲ್ಲಿ ಒಟ್ಟು 1.20 ಲಕ್ಷ ಕೋಟಿ ಇಟ್ಟಿದ್ದೆವೆ ಎಂದು ವಿವರಿಸಿದರು.
ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕೆಂಬುದು ಪಿತೂರಿ ನಡೆಸಿದ್ದಾರೆ. ಬಡವರು, ರೈತರು , ಮಹಿಳೆಯರು, ದಲಿತರು , ಅಲ್ಪಸಂಖ್ಯಾತರ ಏಳಿಗೆ ಅವರಿಗೆ ಮುಖ್ಯವಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ಪಕ್ಷ ನೀಡಿರುವ 25 ಗ್ಯಾರಂಟಿಗಳಿಗೆ ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜು ಖರ್ಗೆ ಯವರು ಸಹಿ ಮಾಡಿ ಹಂಚಿದ್ದಾರೆ. ಬಡಕುಟುಂಬದ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ. ನೀಡುವ ಮಹಾಲಕ್ಷ್ಮಿ ಯೋಜನೆ, ಯುವನ್ಯಾಯದಡಿ ವರ್ಷಕ್ಕೆ 1 ಲಕ್ಷ ರೂ. ನೀಡುವ ಯೋಜನೆ, ರೈತರ ಬೆಳೆಗೆ ನ್ಯಾಯಯುತ ಬೆಲೆ, ಸಾಲ ಮನ್ನಾ, ಸ್ವಾಮಿನಾಥನ್ ವರದಿ ಜಾರಿ ಬೇಡಿಕೆಗಳನ್ನು ಈಡೇರಿಸುವ ‘ರೈತ ನ್ಯಾಯ’ ಯೋಜನೆಗಳ ಭರವಸೆ ನೀಡಿದ್ದೇವೆ. ದೇಶದಲ್ಲಿ ಕಾಂಗ್ರೆಸ್ ಅದಿಕಾರಕ್ಕೆ ಬಂದರೆ ದೇಶಾದ್ಯಂತ ರೈತರ ಸಾಲ ಮನ್ನಾ ಮಾಡುವುದಾಗಿ ತಿಳಿಸಿದರು.