ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಜಮಖಂಡಿಯ ಲೋಕೋಪಯೋಗಿ ಇಲಾಖೆಯ ನಿರೀಕ್ಷಣಾ ಮಂದಿರದಲ್ಲಿ ಕಚೇರಿ ವೇಳೆ ಪಾರ್ಟಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಜಿಲ್ಲಾ ಚುನಾವಣಾ ಅಧಿಕಾರಿ ಕೆ.ಎಂ. ಜಾನಕಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಪಂಚಾಯತ್ ರಾಜ್ ಜಮಖಂಡಿ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಎಸ್.ಎಂ. ನಾಯಕ್, ಸಹಾಯಕ ಇಂಜಿನಿಯರ್ ಗಳಾದ ಜಗದೀಶ ನಾಡಗೌಡ, ರಾಮಪ್ಪ ರಾಥೋಡ, ಕಿರಿಯ ಎಂಜಿನಿಯರ್ ಗಜಾನನ ಪಾಟೀಲ್ ಅಮಾನತುಗೊಂಡವರು.
ನಿರೀಕ್ಷಣಾ ಮಂದಿರದ ಬೀಗಗಳನ್ನು ಪಂಚಾಯತ್ ರಾಜ್ ಇಂಜಿನಿಯರ್ ಗಳಿಗೆ ನೀಡಲು ನಿರ್ದೇಶನ ನೀಡಿದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ ಎಸ್.ಆರ್. ಜಂಬಗಿ ಅವರನ್ನು ಅಮಾನತು ಮಾಡಲಾಗಿದೆ.
ಗುತ್ತಿಗೆದಾರರೊಂದಿಗೆ ಸೇರಿ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕಚೇರಿ ವೇಳೆಯಲ್ಲಿ ನಿರೀಕ್ಷಣಾ ಮಂದಿರದಲ್ಲಿ ಮದ್ಯ ಸೇವನೆ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕೆ.ಎಂ. ಜಾನಕಿ ಅಮಾನತು ಆದೇಶ ಹೊರಡಿಸಿದ್ದಾರೆ.
ಮೇ 22 ರಂದು ಜಮಖಂಡಿ ಪ್ರವಾಸಿ ಮಂದಿರದಲ್ಲಿ ಗುತ್ತಿಗೆದಾರರೊಂದಿಗೆ ಮದ್ಯದ ಪಾರ್ಟಿ ಮಾಡಿದ್ದರು. ಕೆಲಸಕ್ಕೆ ಗೈರುಹಾಜರಾಗಿ ನೀತಿ ಸಂಹಿತೆ ಉಲ್ಲಂಘಿಸಿ ಮದ್ಯಪಾನ ಮಾಡಿದ್ದರು.
ಮೇ 23 ರಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಅದೇ ದಿನ ಜಿಲ್ಲಾಧಿಕಾರಿಗಳು ಶೋಕಾಸ್ ನೋಟಿಸ್ ಜಾರಿ ಮಾಡಿದ್ದರು. ಸಮರ್ಪಕ ಉತ್ತರ ನೀಡುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಅಮಾನತು ಆದೇಶ ಹೊರಡಿಸಿದ್ದಾರೆ.