ಬೆಂಗಳೂರು: “ಎತ್ತಿನಹೊಳೆ ಕಾಮಗಾರಿಗೆ ಅಡಚಣೆ ಉಂಟುಮಾಡಿರುವ 500 ಎಕರೆ ಜಾಗವನ್ನು ಹಸ್ತಾಂತರಿಸಲು ಅರಣ್ಯ ಇಲಾಖೆ ಒಪ್ಪಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ನೀರಾವರಿ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಯೋಜನೆ ಸಂಬಂಧ ವಿಕಾಸಸೌಧದಲ್ಲಿ ಮಂಗಳವಾರ ಕಂದಾಯ ಸಚಿವ ಕೃಷ್ಣ ಭೈರೇಗೌಡ, ಅರಣ್ಯ ಸಚಿವ ಈಶ್ವರ ಖಂಡ್ರೆ, ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಹಾಗೂ ಸಂಬಂಧಪಟ್ಟ ಇಲಾಖೆಗಳ ಪ್ರಮುಖ ಅಧಿಕಾರಿಗಳ ಜತೆ ಸಭೆ ನಡೆಸಿದರು.
ಸಭೆ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಶಿವಕುಮಾರ್ ಅವರು “ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದ ಕೆಲಸ ತ್ವರಿತ ಗತಿಯಲ್ಲಿ ನಡೆಸಲು ಅರಣ್ಯ ಸಚಿವರಾದ ಈಶ್ವರ ಖಂಡ್ರೆ, ದೆಹಲಿ ಪ್ರತಿನಿಧಿ ಟಿ.ಬಿ ಜಯಚಂದ್ರ, ಕಂದಾಯ, ಅರಣ್ಯ, ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಇಂದು ಚರ್ಚೆ ಮಾಡಿದ್ದೇವೆ.
ಈ ಯೋಜನೆಗೆ ಅಗತ್ಯವಿರುವ ಜಾಗವನ್ನು ಅರಣ್ಯ ಇಲಾಖೆ ನೀಡುತ್ತಿದ್ದು, ಇದಕ್ಕೆ ಪರ್ಯಾಯವಾಗಿ ಕಂದಾಯ ಇಲಾಖೆಯು ಅರಣ್ಯ ಇಲಾಖೆಗೆ 500 ಎಕರೆ ಜಾಗ ನೀಡಲಿದೆ. ಈ ಪ್ರಕ್ರಿಯೆಯನ್ನು ಕಾನೂನು ಚೌಕಟ್ಟಿನಲ್ಲಿ ಪೂರ್ಣಗೊಳಿಸುತ್ತೇವೆ.
ಈ ಯೋಜನೆಗಳ ಕಾಮಗಾರಿಗೆ ಎದುರಾಗಿರುವ ಸಮಸ್ಯೆಗಳನ್ನು ಅಧಿಕಾರಿಗಳು ಗುರುತಿಸಿದ್ದು, ಅವುಗಳಿಗೆ ಪರಿಹಾರ ಹುಡುಕಲು ಸಭೆಯಲ್ಲಿ ಚರ್ಚಿಸಿದ್ದೇವೆ ಎಂದರು.