ಬೆಳಗಾವಿ: ಸರಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಕರೆ ನೀಡಿದರು.
ಖಾನಾಪುರ ತಾಲೂಕಿನ ಇಟಗಿ ಹಾಗೂ ಗಂದಿಗವಾಡಿ ಗ್ರಾಮ ಪಂಚಾಯಿತಿಗಳಿಗೆ ಮಂಗಳವಾರ ಭೇಟಿ ನೀಡಿ, ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ಆಗಬೇಕಿರುವ ಕೆಲಸಗಳ ಮಾಹಿತಿ ಪಡೆದರು. ನಂತರ ಜನಸ್ಪಂದನ ಕಾರ್ಯಕ್ರಮ ನಡೆಸಿ, ಜನರ ಅಹವಾಲು ಸ್ವೀಕರಿಸಿ, ಅವುಗಳ ಕುರಿತು ಸಹ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಜನರ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸಬೇಕು. ಸರಕಾರದಿಂದ ವಿಶೇಷ ಅನುದಾನ ಬೇಕಿದ್ದಲ್ಲಿ ಪ್ರಸ್ತಾವನೆ ಸಲ್ಲಿಸಿ. ಜನಪರ ಕೆಲಸಗಳ ಕುರಿತು ನಿರ್ಲಕ್ಷ್ಯ ಮಾಡಬೇಡಿ ಎಂದು ಅವರು ಸೂಚಿಸಿದರು.
ಜೊತೆಗೆ, ನೂತನ ಗ್ರಾಮ ಪಂಚಾಯತ್ ಕಟ್ಟಡ ಹಾಗೂ ಸಾರ್ವಜನಿಕರ ಗ್ರಂಥಾಲಯದ ಪರಿಶೀಲನೆ ನಡೆಸಿದರು.
ಈ ಸಮಯದಲ್ಲಿ ತಹಸಿಲ್ದಾರ, ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ ಪ್ರತೀಕ ಚಿಟಗಿ