ಶಿವಮೊಗ್ಗ : ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು ಪ್ರತಿ ಗ್ರಾಮ ಪಂಚಾಯಿತಿಗಳಿಗೆ ವಾರ್ಷಿಕವಾಗಿ 9ಕೋಟಿ ಅನುದಾನ ವ್ಯಯ ಮಾಡಲಾಗುತ್ತಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಅವರು ಜಿಲ್ಲಾ ಪಂಚಾಯಿತಿ ಕಟ್ಟಡದಲ್ಲಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಘಟಕವನ್ನು ಉದ್ಘಾಟಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ರಾಜ್ಯದ ಅತಿ ಹೆಚ್ಚಿನ ಜನರು ಈ ಯೋಜನೆಗಳ ಲಾಭ ಪಡೆದು ನೆಮ್ಮದಿಯ ಜೀವನ ನಡೆಸುತ್ತಿರುವುದು ಎಲ್ಲರಿಗೂ ಹರ್ಷದ ಸಂಗತಿಯಾಗಿದೆ ಎಂದ ಅವರು, ಇಂತಹ ಜನಪರ ಯೋಜನೆಗಳನ್ನು ವ್ಯವಸ್ಥಿತವಾಗಿ ಅನುಷ್ಟಾನಗೊಳಿಸಿದ ದೇಶದ ಮೊದಲ ರಾಜ್ಯ ಇದಾಗಿದೆ ಎಂದ ಅವರು, ಅನೇಕ ಸಮಸ್ಯೆ-ಸವಾಲುಗಳ ನಡುವೆಯೂ ಸರ್ಕಾರ ಜನರ ಅಹವಾಲುಗಳಿಗೆ ಕಿವಿಯಾಗಿದೆ ಮಾತ್ರವಲ್ಲದೇ ಜನಸಾಮಾನ್ಯರ ನೆರವಿಗೆ ಧಾವಿಸುತ್ತಿದೆ, ಅಭಿವೃದ್ಧಿ ಕಾರ್ಯಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿದೆ ಎಂದರು.
ಆಡಳಿತಾರೂಢ ಸರ್ಕಾರವು ಚುನಾವಣಾ ಪೂರ್ವದಲ್ಲಿ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಸರ್ಕಾರಿ ನೌಕರರ ಏಳನೇ ವೇತನ ಆಯೋಗದ ಅನುಷ್ಠಾನ ಮಾತ್ರವಲ್ಲದೇ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ, ಗೃಹ ಲಕ್ಷ್ಮಿ ಮತ್ತು ಯುವನಿಧಿ ಸೇರಿದಂತೆ ಒಟ್ಟು ಐದು ಜನಪ್ರಿಯ ಗ್ಯಾರಂಟಿ ಯೋಜನೆಗಳನ್ನು ಕಾಲಮಿತಿಯೊಳಗಾಗಿ ಅನುಷ್ಠಾನಗೊಳಿಸಿ ನುಡಿದಂತೆ ನಡೆದು, ರಾಜ್ಯದ ಜನಸಾಮಾನ್ಯರ ಹಿತಕಾಯುವಲ್ಲಿ ಸಕ್ರಿಯವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.