ಯಳಂದೂರು:– ಶಿಕ್ಷಕರು ಭೋದನೆ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ. ಮಾರಯ್ಯ ತಿಳಿಸಿದರು.
ಯಳಂದೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರ ಕ್ರೀಡಾಕೂಟವನ್ನು ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವತಿಯಿಂದ ನಡೆಸಲಾಯಿತು.
ಕ್ರೀಡಾಕೂಟವನ್ನು ಗುಂಡು ಎಸೆಯುವುದರ ಮೂಲಕ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಮಾರಯ್ಯ ರವರು ಮಾತನಾಡಿ ಶಿಕ್ಷಕರು ಬೋಧನೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು, ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಿರಬಹುದು, ಶಿಕ್ಷಕರು ಶಾಲೆಯಲ್ಲಿ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದರಲ್ಲಿ ಹೆಚ್ಚಿನ ಗಮನಹರಿಸುವುದರಿಂದ ಬಹುತೇಕ ಸಂದರ್ಭಗಳಲ್ಲಿ ತಮ್ಮ ಆಸಕ್ತಿಯ ಕ್ರೀಡೆ ಹವ್ಯಾಸಗಳನ್ನು ಮರೆತುಬಿಟ್ಟಿರುತ್ತಾರೆ.
ಹಾಗಾಗಿ ಇಂತಹ ಕ್ರೀಡಾಕೂಟಗಳು ವೃತ್ತಿಜೀವನದಲ್ಲಿ ಚಿರಸ್ಮರಣೀಯವಾಗಿ ಉಳಿಯುತ್ತವೆ, ಕ್ರೀಡೆ ಪರಸ್ಪರರಲ್ಲಿ ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುವುದಲ್ಲದೆ ಒತ್ತಡ ನಿಯಂತ್ರಣಕ್ಕೆ ಅವಕಾಶ ಮಾಡಿಕೊಡುತ್ತದೆ, ಹಾಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಇಂದು ಶಿಕ್ಷಕರು ಮಾಡದ ಕೆಲಸವಿಲ್ಲ, ಹಾಗಾಗಿ ವರ್ಷದಲ್ಲಿ ಕನಿಷ್ಠ ಎರಡು ದಿನಗಳಾದರೂ ಇಂತಹ ಕ್ರೀಡಾಕೂಟಗಳಲ್ಲಿ ಶಿಕ್ಷಕರು ಭಾಗವಹಿಸಿ ಮನಸ್ಸಿನ ಮೇಲಿನ ಒತ್ತಡ ಕಡಿಮೆ ಮಾಡಿಕೊಳ್ಳಬಹುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಿ.ಆರ್. ಸಿ. ನಂಜುಂಡಯ್ಯ, ಸರ್ಕಾರಿ ನೌಕರರ ಸಂಘದ ತಾಲೂಕ ಅಧ್ಯಕ್ಷ ವೈ.ಎಂ. ಮಂಜುನಾಥ್, ಕಾರ್ಯದರ್ಶಿ ಅಮ್ಮನಪುರ ಮಹೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಣ್ಣ,ಜಿಲ್ಲಾ ಖಜಾಂಜಿ ಸಲೀನಾ,ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ವೀರಭದ್ರ ಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ಹಾಗೂ ಶಿಕ್ಷಕರು ಹಾಜರಿದ್ದರು.
ವರದಿ:ಸ್ವಾಮಿ ಬಳೇಪೇಟೆ