ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಬದಲಾವಣೆ ಚರ್ಚೆಯ ಕಾವು ಬೂದಿ ಮುಚ್ಚಿದ ಕೆಂಡದಂತಿದ್ದು, ಸಿಎಂ ಬದಲಾವಣೆ ವಿಚಾರವಾಗಿ ಮತ್ತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಂ ಆಗಿಯೇ ಪ್ರತಿಕ್ರಿಯೆ ನೀಡಿದರು.
ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ನೋಡಪ್ಪ… ಸಿಎಂ ಬದಲಾವಣೆ ಮಾಡುವುದು, ಬಿಡುವುದು ಹೈಕಮಾಂಡ್ ನಾಯಕರಿಗೆ ಸದ್ಯಕ್ಕೆ ಈಗ ಯಾವ ಚರ್ಚೆಯೂ ಇಲ್ಲ ಎಂದು ಸ್ಪಷ್ಟನೆ ನೀಡಿದರು.
ಬದಲಾವಣೆ ಮಾಡುವುದೇ ಆದಲ್ಲಿ.. ಅದು ಅಂತಿಮವಾಗಿ ಹೈಕಮಾಂಡ್ ನಾಯಕರ ತೀರ್ಮಾನ ಆಗಿರಲಿದೆ ಎಂದೂ ಒತ್ತಿ ಹೇಳಿದರು. ಇತ್ತೀಚೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿಗಳು ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಬಲಿಗರು ತಮ್ಮ-ತಮ್ಮ ನಾಯಕರ ಬಗ್ಗೆ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿರುವುದರ ಬಗ್ಗೆ ಮಾತನಾಡಿದ ಸಿಎಂ, ಯಾರೂ ಏನೇ ಮಾತನಾಡಿದರೂ ಅಂತಿಮವಾಗಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಪುನರುಚ್ಚರಿಸಿದರು.
ಇನ್ನು ರಾಜ್ಯ ಕಾಂಗ್ರೆಸ್ ಸರ್ಕಾರವು ನಿಗಮ ಮಂಡಳಿಗಳಿಗೆ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಎಂಬ ಬಿಜೆಪಿ ನಾಯಕರ ಆರೋಪಗಳನ್ನು ತಳ್ಳಿ ಹಾಕಿರುವ ಸಿಎಂ, ಬರೀ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದು ಕುಟುಕಿದರು.




