ತುರುವೇಕೆರೆ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನ ನೀಡಿರುವ ಪ್ರಮುಖ ಹಕ್ಕುಗಳಲ್ಲಿ ಒಂದಾದ ಮತದಾನದಲ್ಲಿ ಪಾಲ್ಗೊಳ್ಳಲು ಯುವಕರನ್ನು ಉತ್ತೇಜಿಸುವ ಸಲುವಾಗಿ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ಡಿ.ಪವಿತ್ರ ತಿಳಿಸಿದರು.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಆಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮತದಾನಕ್ಕಿಂತ ಪ್ರಮುಖವಾದುದು ಇನ್ನೊಂದಿಲ್ಲ, ಖಂಡಿತವಾಗಿ ನಾವೆಲ್ಲರೂ ಮತದಾನ ಮಾಡುತ್ತೇವೆಂದು ಸಂಕಲ್ಪ ಮಾಡಬೇಕು. ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ದೇಶದ ಸರ್ವತೋಮುಖ ಅಭಿವೃದ್ದಿಯಲ್ಲಿ ನಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕೆಂದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ತಹಸೀಲ್ದಾರ್ ಕುಂಞ ಅಹಮದ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಒಂದು ಬಲಿಷ್ಠ ಶಕ್ತಿಯಾಗಿದೆ. ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಿಕೆ, ಮತದಾನದ ಅರಿವು ಮತ್ತು ಜಾಗೃತಿಯನ್ನು ಮೂಡಿಸುವ ಸಲುವಾಗಿ ಚುನಾವಣಾ ಆಯೋಗ ಪ್ರತಿ ವರ್ಷ ಜನವರಿ 25ರಂದು ಮತದಾರರ ದಿನಾಚರಣೆಯನ್ನು ಆಚರಿಸಿಕೊಂಡು ಬರುತ್ತಿದೆ. ಇದಲ್ಲದೆ ಪ್ರತಿ ವರ್ಷ ಮತದಾನ ಪಟ್ಟಿಯ ಪರಿಷ್ಕರಣೆ ನಡೆಸಿ ಹೊಸದಾಗಿ 18 ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಿಕೊಂಡು ಅವರಿಗೆ ಮತ ಚಲಾಯಿಸುವ ಹಕ್ಕನ್ನು ನೀಡುವ ಕೆಲಸವನ್ನು ಸಹ ಆಯೋಗ ಮಾಡುತ್ತಿದೆ ಎಂದರು.
ಬಸವಣ್ಣನವರ ಅನುಭವ ಮಂಟಪದಲ್ಲಿನ ಪ್ರಜಾಪ್ರತಿನಿಧಿ ಸಭೆ, ಫ್ರಾನ್ಸ್, ರಷ್ಯಾ, ಅಮೇರಿಕಾದಲ್ಲಿನ ಪ್ರಜಾ ಕ್ರಾಂತಿಯ ನಂತರ ಬ್ರಿಟಿಷರ ದಾಸ್ಯದಲ್ಲಿದ್ದ ಭಾರತವನ್ನು ಮುಕ್ತಗೊಳಿಸಲು, ಬ್ರಿಟಿಷರ ದಬ್ಬಾಳಿಕೆ ವಿರುದ್ಧ ಕ್ರಾಂತಿ ನಡೆಯಿತು. ಸಾಕಷ್ಟು ಮಹನೀಯರ ಹೋರಾಟ, ತ್ಯಾಗ, ಬಲಿದಾನದ ಫಲವಾಗಿ ಭಾರತ ಸ್ವಾತಂತ್ರ್ಯವಾಯಿತು ಎಂದ ಅವರು, ಸಂವಿಧಾನದ ಹಕ್ಕುಗಳು, ಸೌಲಭ್ಯಗಳು ಕಟ್ಟಕಡೆಯ ವ್ಯಕ್ತಿಗೂ ತಲುಪುವಂತಾಗಲು ಹಾಗೂ ದೇಶದ ಆರ್ಥಿಕ ವ್ಯವಸ್ಥೆ, ಅಭಿವೃದ್ದಿ, ರಕ್ಷಣೆಯ ದೃಷ್ಟಿಯಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡಬೇಕಿದೆ ಎಂದರು.

ಮತದಾರರ ದಿನಾಚರಣೆ ಬಗ್ಗೆ ಉಪನ್ಯಾಸ ನೀಡಿದ ವಕೀಲ ಚನ್ನಕೇಶವಸ್ವಾಮಿ ಮಾತನಾಡಿ, ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ತಮ್ಮ ಅಭಿಪ್ರಾಯವನ್ನು ಮುಕ್ತವಾಗಿ ವ್ಯಕ್ತಪಡಿಸಲು ಇರುವ ಏಕೈಕ ಶಕ್ತಿ ಮತನದಾನವಾಗಿದೆ. 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬಹುದಾಗಿದೆ. 1950 ರಲ್ಲಿ ಭಾರತೀಯ ಚುನಾವಣಾ ಆಯೋಗ ರಚನೆಯಾದ ನಂತರ ಚುನಾವಣಾ ವ್ಯವಸ್ಥೆಯಲ್ಲಿ ಕಾಲಕ್ಕೆ ತಕ್ಕಂತೆ ಹಲವು ಬದಲಾವಣೆಗಳಾಗಿದೆ. ಮೊದಲು ಬ್ಯಾಲೆಟ್ ಪೇಪರ್ ಮೂಲಕ ಮತದಾನ ನಡೆಯುತ್ತಿತ್ತು, ಈಗ ಇವಿಎಂ ಮೆಷಿನ್ ಬಂದಿದೆ, ಇದರಲ್ಲಿ ನೋಟಾ ಎಂಬ ವಿಶೇಷ ಅಂಶವನ್ನು ಸಹ ಅಳವಡಿಸಲಾಗಿದೆ. ಇತ್ತೀಚೆಗೆ ಹೊಸದಾಗಿ ವಿಕಲಚೇತನರಿಗೆ, ವಯೋವೃದ್ದರು ಮನೆಯಲ್ಲೇ ಮತದಾನ ಮಾಡುವ ಅವಕಾಶವನ್ನು ಆಯೋಗ ಕಲ್ಪಿಸಿದೆ. ದೇಶದ ಪ್ರತಿಯೊಬ್ಬ ನಾಗರೀಕರಿಗೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸಬೇಕೆಂದರು.
ಸಮಾರಂಭದಲ್ಲಿ ಮತದಾನ ಪ್ರತಿಜ್ಙಾ ವಿಧಿ ಬೋದಿಸಲಾಯಿತು. ಸಿವಿಲ್ ನ್ಯಾಯಾಧೀಶರಾದ ಪುರುಷೋತ್ತಮ್, ಬಿಇಒ ಸೋಮಶೇಖರ್, ವಕೀಲರ ಸಂಘದ ಅಧ್ಯಕ್ಷ ನಟರಾಜ್, ಉಪಾಧ್ಯಕ್ಷ ನಂಜೇಗೌಡ, ಕಾರ್ಯದರ್ಶಿ ಕುಮಾರ್, ಉಪಪ್ರಾಂಶುಪಾಲ ವೆಂಕಟೇಶ್, ಉಪನ್ಯಾಸಕರಾದ ಶಹನಾಜ್, ಹರೀಶ್, ಬೋಧಕ ಬೋದಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ: ಗಿರೀಶ್ ಕೆ ಭಟ್




