ತುಮಕೂರು: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ಗೂಂಡಾ ವರ್ತನೆ ನಡೆಸಿ ಕೊಲೆ ಬೆದರಿಕೆ ಹಾಕಿ, ಸುಳ್ಳು ಮೊಕದ್ದಮೆ ದಾಖಲಿಸಿರುವ ಸರ್ಕಾರದ ಕ್ರಮ ಖಂಡಿಸಿ ತುಮಕೂರು ಜಿಲ್ಲಾ ಬಿಜೆಪಿ ಮುಖಂಡರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಶಾಂತಿ, ಅರಾಜಕತೆ, ಅಭದ್ರತೆ ಮತ್ತು ಸರ್ವಾಧಿಕಾರಿ ವಾತಾವರಣವನ್ನು ಸೃಷ್ಟಿಸಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಶಂಕರ್ ಹೆಬ್ಬಾಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದ ರಾಜ್ಯದ ಅಭಿವೃದ್ದಿ ಶೂನ್ಯವಾಗಿದೆ. ಗ್ಯಾರಂಟಿ ಯೋಜನೆಗಳನ್ನೇ ಹೇಳಿಕೊಂಡು ಜನರನ್ನು ವಂಚಿಸುತ್ತಿದೆ. ಸರ್ಕಾರದ ದುರಾಡಳಿತ ಜನರಿಗೆ ತಿಳಿಯಬಾರದೆಂಬ ನಿಟ್ಟಿನಲ್ಲಿ ವಿವಾದಗಳನ್ನು ಸೃಷ್ಟಿಸಿ ಜನರ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ ಎಂದರು.
ವಿಧಾನಸೌಧದ ಬಳಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದವನ ವಿರುದ್ಧ ಕ್ರಮ ತೆಗೆದುಕೊಳ್ಳದೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿಕೊಂಡ ಕಾಂಗ್ರೆಸ್ ಸರ್ಕಾರ ಆತನ ವಿರುದ್ಧ ಈವರೆಗೂ ಕ್ರಮ ತೆಗೆದುಕೊಂಡಿಲ್ಲ. ಆದರೆ, ಸರ್ಕಾರದ ಲೋಪದೋಷಗಳನ್ನು ಪ್ರಶ್ನಿಸಲು ಮುಂದಾದ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರನ್ನು ಹತ್ತಿಕ್ಕಲು ಸುಳ್ಳು ಆರೋಪದ ವಿವಾದ ಸೃಷ್ಟಿಸಲಾಗಿದೆ. ಪೋಲಿಸರು ಸಿ.ಟಿ.ರವಿಯವರು ತಮ್ಮ ಅಭಿಪ್ರಾಯ ಹೇಳಲೂ ಅವಕಾಶ ನೀಡದೆ ವಶಕ್ಕೆ ಪಡೆದು ಭಯೋತ್ಪಾದಕರ ರೀತಿ ನಡೆಸಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಪ್ರಜಾಪ್ರಭುತ್ವದ ದೇಗುಲದಲ್ಲಿ ಓರ್ವ ಶಾಸಕರಿಗೆ ರಕ್ಷಣೆ ಇಲ್ಲದಂತಾಗಿದ್ದು, ಇನ್ನು ಈ ಸರ್ಕಾರ ಜನಸಾಮಾನ್ಯರಿಗೆ ಯಾವ ರೀತಿ ರಕ್ಷಣೆ ಒದಗಿಸುತ್ತದೆ. ರಾಜ್ಯದಲ್ಲಿ ಶಾಂತಿ, ಸುವ್ಯವಸ್ಥೆ ಹಾಳಾಗುತ್ತಿದೆ. ರಾಜ್ಯಪಾಲರು ಕೂಡಲೇ ಮಧ್ಯೆ ಪ್ರವೇಶಿಸಿ ಈ ಭ್ರಷ್ಟ, ಜನವಿರೋಧಿ ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಬ್ಯಾಟರಂಗೇಗೌಡ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಎಸ್.ಶಿವಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ.ರವೀಶಯ್ಯ, ಉಪಾಧ್ಯಕ್ಷ ಭೈರಪ್ಪ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದರಾಮಣ್ಣ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಜ್ಯೋತಿ ತಿಪ್ಪೇಸ್ವಾಮಿ, ಎಸ್.ಸಿ.ಮೋರ್ಚಾ ಜಿಲ್ಲಾಧ್ಯಕ್ಷ ಆಂಜನಪ್ಪ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ಕೆ.ವೇದಮೂರ್ತಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಚೇತನ್, ಗುಬ್ಬಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಪಂಚಾಕ್ಷರಿ, ನಗರ ಅಧ್ಯಕ್ಷ ಟಿ.ಹೆಚ್.ಹನುಮಂತರಾಜು, ಮುಖಂಡರಾದ ಬನಶಂಕರಿಬಾಬು, ಗಣೇಶ್ಪ್ರಸಾದ್, ಕೆ.ಪಿ.ಮಹೇಶ್ ಸೇರಿದಂತೆ ನೂರಾರು ಮಂದಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
ವರದಿ: ಗಿರೀಶ್ ಕೆ ಭಟ್