ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗ ಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಕರೆ ನೀಡಿದರು.
ಬೆಂಗಳೂರು ನಗರದ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಧ್ಯಮ ಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಭಾನುವಾರ ಮಾತಾಡಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ವಿಚಾರವಾಗಿ ನ್ಯಾಯಾಲಯದಿಂದ ಸದ್ಯದಲ್ಲೇ ಸೂಚನೆ ಬರುವ ಸಾಧ್ಯತೆ ಇದೆ. ಇನ್ನು ಬೆಂಗಳೂರು ನಗರ ಪಾಲಿಕೆ ಚುನಾವಣೆಯನ್ನು ನಡೆಸಬೇಕಾಗಿದ್ದು ಗ್ರೇಟರ್ ಬೆಂಗಳೂರು ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದೇವೆ.
ಯಾವುದೇ ಕ್ಷಣದಲ್ಲಿ ಈ ಚುನಾವಣೆಗಳು ಘೋಷಣೆಯಾಗಬಹುದು ಇದಕ್ಕೆ ನಾವೆಲ್ಲರೂ ಸಿದ್ದತೆ ಮಾಡಿಕೊಳ್ಳಬೇಕು ಎಂದರು.
ಈ ಚುನಾವಣೆಗಳ ಸಿದ್ದತೆಗಾಗಿ ಕಾರ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಾಧ್ಯಕ್ಷರುಗಳನ್ನು ಸೇರಿಸಿ ಕೊಂಡು ವಿಭಾಗವಾರು ಸಮಿತಿ ರಚಿಸಿದ್ದೇವೆ. ಈ ಸಮಿತಿ ಮಾರ್ಚ್ ಒಳಗಾಗಿ ರಾಜ್ಯ ಪ್ರವಾಸ ಮಾಡಿ ಎಲ್ಲಾ ಕಡೆ ಸಮನ್ವಯತೆ ಸಾಧಿಸಿ ತಯಾರಿ ಮಾಡಿಕೊಳ್ಳಬೇಕು ಎಲ್ಲೆಲ್ಲಿ ನಾಯಕರೇ ಮಧ್ಯೆ ಹೊಂದಾಣಿಕೆ ಸಾಧಿಸಿ ಶೇಕಡಾ 50%ರಷ್ಟು ಮಹಿಳಾ ಅಭ್ಯರ್ಥಿಗಳನ್ನು ತಯಾರು ಮಾಡುವ ಬಗ್ಗೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷ ಸಮುದ್ರ ಇದ್ದಂತೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿವಿಧ ನಾಯಕರು ಹಂತ ಹಂತವಾಗಿ ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಇಂದು ಜೆಡಿಎಸ್ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಜೆಡಿಎಸ್ ಪಕ್ಷ ತೊರೆದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಲು ಹಾಕಿ ಕಾಂಗ್ರೆಸ್ ಬಾವುಟ ನೀಡಿ ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್ ಸೇರ್ಪಡೆ ಮಾಡಿಕೊಂಡರು.
ವರದಿ: ಅಯ್ಯಣ್ಣ ಮಾಸ್ಟರ್




