ಬೆಂಗಳೂರು: ಉದ್ಯಮಿಗಳು, ಸೆಲೆಬ್ರಿಟಿಗಳಿಗೆ ಮಾದಕ ಪದಾರ್ಥಗಳನ್ನು ಸರಬರಾಜು ಮಾಡುತ್ತಿದ್ದ ಆರೋಪದಡಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಮತ್ತು ಪ್ರಶಾಂತ್ ರಂಕ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸಿರುವ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲು ಸಿಸಿಬಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.
ಹೈಕೋರ್ಟ್ ಹೇಳಿದ್ದೇನು?: ಆರೋಪಪಟ್ಟಿಯಲ್ಲಿ ಸಾಕ್ಷ್ಯಾಧಾರಗಳು ಮತ್ತು ಇತರೆ ಆರೋಪಿಗಳ ಹೇಳಿಕೆಗಳನ್ನು ಹೊರತುಪಡಿಸಿದರೆ ಅರ್ಜಿದಾರರು ಪಾರ್ಟಿಗಳನ್ನು ಆಯೋಜನೆ ಮಾಡುವುದು ಅಥವಾ ಮಾದಕ ವಸ್ತುಗಳನ್ನು ಮಾರಾಟ ಮಾಡಿರುವ ಸಂಬಂಧ ತನಿಖಾಧಿಕಾರಿಗಳು ಯಾವುದೇ ಸಾಕ್ಷ್ಯಾಧಾರಗಳನ್ನು ಒದಗಿಸಿಲ್ಲ. ಹೀಗಾಗಿ, ಅರ್ಜಿದಾರರ ವಿರುದ್ದ ಕ್ರಿಮಿನಲ್ ವಿಚಾರಣಾ ಪ್ರಕ್ರಿಯೆ ಮುಂದುವರೆಯುವುದು ಕಾನೂನಿನ ದುರ್ಬಳಕೆಯಾಗುತ್ತದೆ ಎಂದಿದ್ದ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು.
ಈ ಬಗ್ಗೆ ಗೃಹ ಮತ್ತು ಕಾನೂನು ಇಲಾಖೆಯ ಸಮ್ಮತಿ ಪಡೆದಿರುವ ಸಿಸಿಬಿ ಅಧಿಕಾರಿಗಳು ಹೈಕೋರ್ಟ್ ಆದೇಶ ಪ್ರಶ್ನಿಸಿ, ಸುಪ್ರೀಂ ಕೋರ್ಟ್‌ನಲ್ಲಿ ಇಂದು ಅಥವಾ ನಾಳೆ ಮೇಲ್ಮನವಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ಸಿಸಿಬಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.
ಕಾಟನ್ ಪೇಟೆ ಠಾಣೆಯಲ್ಲಿ ಸಿಸಿಬಿ ಪೊಲೀಸರು ದಾಖಲಿಸಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ ನಟಿ ರಾಗಿಣಿ ದ್ವಿವೇದಿ ಹಾಗೂ ಪ್ರಶಾಂತ್ ರಂಕಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.



