ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವ ಕಣ್ತುಂಬಿಕೊಳ್ಳಲು ಬಂದಿದ್ದ 11 ಆರ್ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದಾರೆ.
ಈ ದುರಂತಕ್ಕೆ ಹಲವು ಅಧಿಕಾರಿಗಳ ತಲೆದಂಡವಾಗುತ್ತಿದ್ದು, ಇದೀಗ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಮತ್ತು ಖಜಾಂಚಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರ್ಸಿಬಿ ಅಭಿಮಾನಿಗಳ ಸಾವಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತರು ಸೇರಿದಂತೆ ಐವರು ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯದಿಂದ ಅಮಾನತು ಮಾಡಿತ್ತು.
ಇದರ ಬೆನ್ನಲ್ಲೇ ಪದಾಧಿಕಾರಿಗಳ ಆಕ್ರೋಶದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಕಾರ್ಯದರ್ಶಿ ಶಂಕರ್ ಹಾಗೂ ಕೆಎಸ್ಸಿಎ ಖಜಾಂಚಿ ಜೈರಾಮ್ ನೈತಿಕ ಹೊಣೆ ಹೊತ್ತು ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಹೈಕೋರ್ಟ್ ರಿಲೀಫ್ ಕೊಟ್ಟ ನಂತರ ಅಧ್ಯಕ್ಷ ಬ್ರಿಜೇಶ್ ಪಾಟೀಲ್ ಸಭೆ ನಡೆಸಿ ರಾಜೀನಾಮೆಗೆ ಸೂಚನೆ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್ಸಿಎಯ ಇಬ್ಬರು ಅಧಿಕಾರಿಗಳು ರಾಜೀನಾಮೆ ನೀಡಿದ್ದು, ಸದ್ಯ ತೆರವುಗೊಂಡ ಸ್ಥಾನಕ್ಕೆ ತಾತ್ಕಲಿಕವಾಗಿ ಜಂಟಿ ಕಾರ್ಯದರ್ಶಿ ಶಾವೀರ್ ತಾರಪೂರ್ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿದು ಬಂದಿದೆ.




