ಕಲಬುರಗಿ: ರಾಜ್ಯದಲ್ಲಿ ಸದ್ಯಕ್ಕೆ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಎಐಸಿಸಿ ಮುಂದೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬುಧವಾರ ಹೇಳಿದ್ದಾರೆ.
ಕಲಬುರಗಿಯ ತಮ್ಮ ನಿವಾಸದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುವಾಗ ಎಲ್ಲರಿಗೂ ತಿಳಿಸುತ್ತೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನವದೆಹಲಿಯಲ್ಲಿ ತಮ್ಮನ್ನು ಹಾಗೂ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿಯಾದಾಗ, ಕರ್ನಾಟಕದಲ್ಲಿನ ಸಚಿವ ಸಂಪುಟ ಪುನಾರಚನೆ ಅಥವಾ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಯಾವುದೇ ಮಾತುಕತೆ ನಡೆಸಿಲ್ಲ ಎಂದು ಖರ್ಗೆ ಸ್ಪಷ್ಪಪಡಿಸಿದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಹಾಗೂ ಜಾತಿ ಸಮೀಕ್ಷೆ ಕುರಿತು ಸಭೆಯಲ್ಲಿ ಚರ್ಚಿಸಿದೆವು. ಕಾಲ್ತುಳಿತದ ಘಟನೆ ಕಾಂಗ್ರೆಸ್ ಸೇರಿದಂತೆ ಎಲ್ಲರನ್ನೂ ಆಘಾತಕ್ಕೀಡುಮಾಡಿದೆ. ಹೀಗಾಗಬಾರದಿತ್ತು.
ಇಂತಹ ಘಟನೆಗಳು ನಡೆಯದಂತೆ ಮುಂದಿನ ದಿನಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಸೂಚಿಸಿದ್ದೇವೆ. ಪೊಲೀಸ್ ಅಧಿಕಾರಿಗಳ ಅಮಾನತು, ಮ್ಯಾಜಿಸ್ಟ್ರೇಟ್ ತನಿಖೆ ಮತ್ತು ನ್ಯಾಯಾಂಗ ತನಿಖೆಗೆ ಆದೇಶ ಮತ್ತು ನೊಂದವರಿಗೆ ಪರಿಹಾರದ ಬಗ್ಗೆ ಸಿಎಂ ಮತ್ತು ಉಪ ಮುಖ್ಯಮಂತ್ರಿ ವಿವರಿಸಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.




