ಬೆಂಗಳೂರು: ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಉತ್ತರ ಕೊಡಬೇಕಾಗಿರುವುದು ಕೇಂದ್ರ ಸರ್ಕಾರ. ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ನಾನು ಹಾಗೂ ಸಿಎಂ ಸಿದ್ದರಾಮಯ್ಯನವರು ಸೇರಿ ರಾಜ್ಯ ಸರ್ಕಾರಕ್ಕೆ ದುಬಾರಿಯಾಗುವ ತೀರ್ಮಾನ ಕೈಗೊಂಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಪರಿಹಾರ ವಿಚಾರವಾಗಿ ಕಬ್ಬು ಬೆಳೆಗಾರರ ಸಮಸ್ಯೆ, ಮೆಕ್ಕೆಜೋಳ ವಿಚಾರವಾಗಿ ಕೇಂದ್ರ ಸರ್ಕಾರ ಈವರೆಗೂ ಬಾಯಿ ಬಿಟ್ಟಿಲ್ಲ. ಬಿಜೆಪಿಯ ಸಂಸದರು ರಾಜ್ಯದ ಯಾವುದೇ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿಲ್ಲ. ಬೊಮ್ಮಾಯಿ ಅವರು ರಾಜ್ಯ ಸರ್ಕಾರ ಖರೀದಿ ಮಾಡಬೇಕು ಎಂದು ಹೇಳುತ್ತಿದ್ದಾರೆ.
ಹಾಗಿದ್ದರೆ ಕೇಂದ್ರ ಸರ್ಕಾರದ ಪಾಲೇನು? ಇದರ ತೀರ್ಮಾನ ಮಾಡುವವರು ಯಾರು? ಪ್ರತಿಯೊಂದಕ್ಕೂ ಬೆಲೆ ನಿಗದಿ ಮಾಡುವುದು ಕೇಂದ್ರ ಸರ್ಕಾರ. ಆದರೂ ಈವರೆಗೆ ಈ ವಿಚಾರಗಳಲ್ಲಿ ಕೇಂದ್ರ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಪರಿಹಾರ ನೀಡಲೆಂದೇ ನಾವಿದ್ದೇವೆ.
ಇದರಲ್ಲಿ ಕೇಂದ್ರ ಸರ್ಕಾರದ ಜವಾಬ್ದಾರಿ ಇದೆಯಲ್ಲವೇ? ಇಲ್ಲಿಯವರೆಗೂ ಬೊಮ್ಮಾಯಿ ಅವರು ಯಾಕೆ ಸಂಸತ್ತಿನಲ್ಲಿ ಈ ವಿಚಾರವಾಗಿ ಧ್ವನಿ ಎತ್ತಿಲ್ಲ? ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿಲ್ಲ? ಎಂದು ಪ್ರಶ್ನಿಸಿದರು.




