Ad imageAd image

ಅಸಲಿ ಪತ್ರಕರ್ತರನ್ನು ಗೌರವಿಸಿ ನಕಲಿ ಪತ್ರಕರ್ತರ ವಿರುದ್ಧ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು

Bharath Vaibhav
ಅಸಲಿ ಪತ್ರಕರ್ತರನ್ನು ಗೌರವಿಸಿ ನಕಲಿ ಪತ್ರಕರ್ತರ ವಿರುದ್ಧ ಜಾಗೃತಿ ಮೂಡಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು
WhatsApp Group Join Now
Telegram Group Join Now

ಧಾರವಾಡ: ಕಾರ್ಯಾಂಗ, ಶಾಸಕಾಂಗ ಮತ್ತು ನ್ಯಾಯಾಂಗ ಎಂಬ ಅಂಗಗಳು ಸಂವಿಧಾನದಲ್ಲಿವೆ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದು ಮಾಧ್ಯಮವನ್ನು ಗುರುತಿಸಲಾಗಿದೆ. ಅಧಿಕೃತ ಪತ್ರಕರ್ತರನ್ನು ಗುರುತಿಸಿ ಗೌರವಿಸಲು ಸಹಾಯವಾಗುವಂತೆ ನಕಲಿ ಹಾಗೂ ವಸೂಲಿ ಪತ್ರಕರ್ತರ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯವಿದೆ. ವಿಶೇಷವಾಗಿ ಅನೇಕರು ಮಾಧ್ಯಮದ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳನ್ನು ಹೆದರಿಸುವುದು, ಒತ್ತಡಕ್ಕೆ ಒಳಪಡಿಸುವುದು ನಡೆಯುತ್ತಿದ್ದು, ಸರ್ಕಾರಿ ನೌಕರರಲ್ಲಿ ಮಾಧ್ಯಮ ಹಾಗೂ ಮಾಧ್ಯಮ ಪ್ರತಿನಿಧಿಗಳ ಬಗ್ಗೆ ಸರಿಯಾದ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸರ್ಕಾರಿ ನೌಕರರಿಗೆ ಮಾಧ್ಯಮ ಕಾರ್ಯಾಗಾರಗಳನ್ನು ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ 2025–28ನೇ ಅವಧಿಯ ನೂತನ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಅಭಿನಂದನಾ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಸರ್ಕಾರದ ವಿವಿಧ ಇಲಾಖೆಗಳಿಗೆ ಮಾಧ್ಯಮದ ಹೆಸರಿನಲ್ಲಿ ಇತರರು ಭೇಟಿ ನೀಡಿ ಮಾಹಿತಿ ಕೇಳುವುದು ಅಥವಾ ಅಧಿಕಾರಿಗಳು, ಸಿಬ್ಬಂದಿಗಳಿಗೆ ಮಾಹಿತಿ ಹೆಸರಿನಲ್ಲಿ ಹೆದರಿಸುವುದು, ಹಣ ಕೇಳುವಂತಹ ಘಟನೆಗಳು ಜರಗುತ್ತಿವೆ. ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ಧಾರವಾಡ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳ ಸಂಖ್ಯೆ ಕಡಿಮೆ ಇದ್ದರೂ, ಅಧಿಕೃತ ಪತ್ರಕರ್ತರಿಗೆ ವೃತ್ತಿ ದೃಷ್ಟಿಯಿಂದ ಸಿಗಬೇಕಾದ ಮಾಹಿತಿ ಹಾಗೂ ಗೌರವ ನೀಡುವ ಕುರಿತು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮಾಧ್ಯಮದ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಮಾಧ್ಯಮ ಪ್ರತಿನಿಧಿಗಳ ಕುರಿತು ತಿಳಿಸುವ ಅಗತ್ಯವಿದೆ ಎಂದು ಅವರು ಹೇಳಿದರು.

ಸಂವಿಧಾನದ 19ನೇ ಅನುಸೂಚಿಯಲ್ಲಿ ವಾಕ್ ಸ್ವಾತಂತ್ರ್ಯದ ಕುರಿತು ವಿವರಿಸಲಾಗಿದೆ. ಅದರಡಿ ಮಾಧ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಕಳೆದ 15 ವರ್ಷಗಳಿಂದ ಕರ್ನಾಟಕದಲ್ಲಿ ಸೇವೆ ಸಲ್ಲಿಸಿದ್ದೇನೆ. ಬೆಂಗಳೂರು, ಮೈಸೂರು, ಕಲಬುರ್ಗಿ ಹಾಗೂ ಬೆಳಗಾವಿ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಎಲ್ಲೆಡೆ ಮಾಧ್ಯಮದವರು ಉತ್ತಮ ಸಹಕಾರ ನೀಡಿದ್ದಾರೆ. ಸಮಸ್ಯೆಗಳ ಕುರಿತು ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿರುವರು. ಒಳ್ಳೆಯ ಕಾರ್ಯಗಳಿಗೆ ಬೆನ್ನು ತಟ್ಟಿ ಪ್ರೋತ್ಸಾಹವೂ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು.

ವಿವಿಧ ಕ್ಷೇತ್ರದ ಸಾಧಕರನ್ನು ಜಿಲ್ಲಾಡಳಿತದಿಂದ ಪ್ರತಿವರ್ಷ ಸನ್ಮಾನಿಸಲಾಗುತ್ತದೆ. ಆದರೆ ಇದೇ ಮೊದಲ ಬಾರಿಗೆ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಸನ್ಮಾನಿಸಲಾಗುತ್ತಿದೆ. ಸರಿಯಾದ ನಿರ್ಧಾರ ಕೈಗೊಳ್ಳಲು ಮಾಧ್ಯಮದ ಅಗತ್ಯವಿದೆ. ಸರಿಯಾದ ಮಾಹಿತಿ ಪಡೆದು ಸರಿಯಾದ ನಿರ್ಧಾರ ಕೈಗೊಳ್ಳಲಾಗಿದೆ. ಸರಿಪಡಿಸಬಹುದಾದ ವಿಷಯಗಳನ್ನು ಜಿಲ್ಲಾಡಳಿತದಿಂದ ಸರಿಪಡಿಸಲಾಗಿದೆ. ಸರ್ಕಾರದಿಂದ ಪತ್ರಕರ್ತರಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಲಾಗುತ್ತಿದೆ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಮಾಧ್ಯಮ ಅತ್ಯವಶ್ಯಕ. ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವ ಭಾವನೆ ಮಾಧ್ಯಮ ಹಾಗೂ ಜಿಲ್ಲಾಡಳಿತ ಎರಡಕ್ಕೂ ಇದೆ. ನಾನು ಬಿಎಸ್ಸಿ ಅಗ್ರಿ ಓದುವಾಗ ಫಾರ್ಮ್ ಜರ್ನಲಿಸಂ ಕಲಿತಿದ್ದೇನೆ. ಹೀಗಾಗಿ ಪತ್ರಿಕಾ ರಂಗದ ಸವಾಲುಗಳು ನನಗೆ ತಿಳಿದಿವೆ. ಯಶಸ್ಸಿನ ಬಗ್ಗೆ ಯಾವುದೇ ಕಾರಣಕ್ಕೂ ತಲೆಕೆಡಿಸಿಕೊಳ್ಳದೆ ನಮ್ಮ ಕರ್ತವ್ಯವನ್ನು ನಿಷ್ಠೆಯಿಂದ ಮಾಡುತ್ತಾ ಸಾಗಬೇಕು ಎಂದು ಅವರು ತಿಳಿಸಿದರು.

ತಾಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಾಧ್ಯಮದ ಕುರಿತು ಕಾರ್ಯಾಗಾರ ಆಯೋಜಿಸುವುದಾಗಿ ತಿಳಿಸಿದ ಅವರು, ಹುಬ್ಬಳ್ಳಿಯಲ್ಲಿ ಹಿಂದೆ ಸಂಪಾದಕರೊಂದಿಗೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಎಂದರು. ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿರುವುದರಿಂದ ನಿಜವಾದ ಪತ್ರಕರ್ತರಿಗೆ ಮಾಹಿತಿ ನೀಡುವಲ್ಲಿ ಅಧಿಕಾರಿಗಳಿಗೆ ತೊಂದರೆ ಆಗುತ್ತಿದೆ. ನಿಜವಾದ ಪತ್ರಕರ್ತರಿಗೆ ಇಲಾಖೆಗಳ ಮಾಹಿತಿ ದೊರೆಯುವಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಮಾಧ್ಯಮ ಕುರಿತು ಕಾರ್ಯಾಗಾರ ಆಯೋಜಿಸಲಾಗುವುದು. ಇದರ ಮೂಲಕ ಅಧಿಕಾರಿಗಳಲ್ಲಿ ಇರುವ ಗೊಂದಲವನ್ನು ನಿವಾರಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಮಾತನಾಡಿ, ಸರ್ಕಾರದ ಯೋಜನೆಗಳು, ಬಜೆಟ್ ಸೇರಿದಂತೆ ವಿವಿಧ ವಿಷಯಗಳನ್ನು ಸಾರ್ವಜನಿಕರಿಗೆ ಮುಟ್ಟಿಸುವ ಮಹತ್ತರ ಜವಾಬ್ದಾರಿ ಮಾಧ್ಯಮಗಳ ಮೇಲಿದೆ ಎಂದರು. ದೇಶದ ನಾಗರಿಕರಿಗೆ ಸಿಗುವ ಅವಕಾಶಗಳ ಕುರಿತು ಜನರಿಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಘನತೆ ಮತ್ತು ಸ್ಥಾನವಿದೆ. ಸ್ವಾತಂತ್ರ್ಯ ಹೋರಾಟದ ಕಾಲದಲ್ಲಿಯೂ ಹಲವು ನಾಯಕರು ಲೇಖನಿ ಮತ್ತು ಪತ್ರಿಕೆಗಳ ಮೂಲಕ ಹೋರಾಟಕ್ಕೆ ಕೊಡುಗೆ ನೀಡಿದ್ದಾರೆ. ಹೊಸ ತಂತ್ರಜ್ಞಾನಗಳ ಬಳಕೆಯ ಅರಿವು ಅಗತ್ಯವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗುವ ಸುದ್ದಿಗಳಿಗೆ ಗಟ್ಟಿತನ ಇರುವುದಿಲ್ಲ. ಪ್ರತಿದಿನವೂ ಹಲವು ಸಮಸ್ಯೆಗಳು ಎದುರಾಗುತ್ತಿದ್ದು, ಅವುಗಳನ್ನು ಪರಿಹರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ಬಂಡು ಕುಲಕರ್ಣಿ ಮಾತನಾಡಿ, ಸೌಹಾರ್ದಯುತ ಸನ್ಮಾನ ಕಾರ್ಯಕ್ರಮ ನಿಜಕ್ಕೂ ಅಚ್ಚರಿ ತಂದಿದೆ. ಇಲ್ಲಿನ ನೆಲದ ಗುಣವೇ ಸೌಹಾರ್ದತೆಯಾಗಿದೆ. ಪತ್ರಕರ್ತರ ಕಾರ್ಯಾಗಾರ ಹಮ್ಮಿಕೊಂಡರೆ ಜಿಲ್ಲಾಡಳಿತದೊಂದಿಗೆ ಸಂಘ ಕೈಜೋಡಿಸಲಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಬೇಕು ಎಂದರು.

ಸಂಯುಕ್ತ ಕರ್ನಾಟಕ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಮೋಹನ ಹೆಗಡೆ ಮಾತನಾಡಿ, ಎರಡು ವರ್ಷಗಳ ಹಿಂದೆ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಸ್ವಾತಂತ್ರ್ಯ ಹೋರಾಟ, ಕರ್ನಾಟಕ ಚಳುವಳಿ, ಕರ್ನಾಟಕ ಶಬ್ದ ಉತ್ಪತ್ತಿ ಸೇರಿದಂತೆ ಹಲವು ಹೋರಾಟಗಳಿಗೆ ಧಾರವಾಡ ಜಿಲ್ಲೆ ತನ್ನದೇ ಆದ ಕೊಡುಗೆ ನೀಡಿದೆ. ಗೌರವ ಗುಪ್ತಾ, ದರ್ಪನ್ ಜೈನ್ ಸೇರಿದಂತೆ ಹಲವು ಜಿಲ್ಲಾಧಿಕಾರಿಗಳು ಉತ್ತಮ ಸೇವೆ ಸಲ್ಲಿಸಿದ್ದಾರೆ. ಪತ್ರಿಕೋದ್ಯಮ ಬದಲಾಗುತ್ತಿದೆ. ಉತ್ತಮ ಆಡಳಿತ ವ್ಯವಸ್ಥೆಗೆ ಮಾಧ್ಯಮದ ಸಹಕಾರ ಅಗತ್ಯವಾಗಿದೆ. ನಕಲಿ ಪತ್ರಕರ್ತರ ಹಾವಳಿ ಹೆಚ್ಚಾಗಿದ್ದು, ಅದರ ನಿಯಂತ್ರಣ ಅಗತ್ಯವಾಗಿದೆ ಎಂದು ಹೇಳಿದರು.

ಕನ್ನಡಪ್ರಭ ಪತ್ರಿಕೆಯ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ ಮಾತನಾಡಿ, ಒಳ್ಳೆಯ ಕಾರ್ಯಗಳಿಗೆ ಮಾಧ್ಯಮದಿಂದ ಸಹಕಾರ ನೀಡಲಾಗುತ್ತದೆ. ಕ್ರಿಯಾಶೀಲ ಅಧಿಕಾರಿಗಳಿಗೆ ಧಾರವಾಡದಲ್ಲಿ ಉತ್ತಮ ವಾತಾವರಣವಿದೆ. ಅಧಿಕಾರಿಗಳು ಮೈಯೆಲ್ಲ ಕಣ್ಣಾಗಿ ಕೆಲಸ ಮಾಡಬೇಕು. ಅಸಹಾಯಕರಿಗೆ ಧ್ವನಿಯಾಗಿ ಮಾಧ್ಯಮ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಕ್ರಿಯಾಶೀಲ ಪತ್ರಕರ್ತರು ಇದ್ದಾರೆ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಸ್ವಾಗತಿಸಿ ಮಾತನಾಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕ ಡಾ. ಸುರೇಶ್ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿ, ಕರ್ನಾಟಕ ವಿಶ್ವವಿದ್ಯಾಲಯದಿಂದ ಸಾಕಷ್ಟು ಪತ್ರಕರ್ತರು ಬಂದಿದ್ದು, ಅವರು ಧಾರವಾಡದ ಬಗ್ಗೆ ಹೆಚ್ಚಿನ ಕಳಕಳಿ ಹೊಂದಿದ್ದಾರೆ. ಯಾವುದೇ ಸಮಸ್ಯೆಗಳಿದ್ದರೂ ತಕ್ಷಣ ಸ್ಪಂದಿಸುತ್ತಾರೆ. ಮಾಧ್ಯಮ ಸಂಪರ್ಕ ಉತ್ತಮವಾಗಿದ್ದರೆ ಉತ್ತಮ ಆಡಳಿತ ನೀಡಲು ಸಾಧ್ಯ. ಜನಹಿತದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯ ಜೆ. ಅಬ್ಬಾಸ್ ಮುಲ್ಲಾ, ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಗುರು ಭಾಂಡಗೆ, ಡೆಕ್ಕನ್ ಹೆರಾಲ್ಡ್ ಪತ್ರಿಕೆಯ ಬ್ಯೂರೋ ಮುಖ್ಯಸ್ಥ ವೆಂಕಟರಾಜು ಕೆ.ಜಿ., ವಿಜಯವಾಣಿ ದಿನಪತ್ರಿಕೆಯ ಸ್ಥಾನಿಕ ಸಂಪಾದಕ ಪ್ರಕಾಶ ಶೆಟ್ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ರಿ) ಧಾರವಾಡ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳು, ಜಿಲ್ಲಾ ಕಾರ್ಯಕಾರಿಣಿ ಸದಸ್ಯರು ಹಾಗೂ ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ, ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಶ್ರೀಪಾದ ಕುಲಕರ್ಣಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ವಿವಿಧ ಪತ್ರಿಕೆಗಳ ಸ್ಥಾನಿಕ ಸಂಪಾದಕರಾದ ವಿಠ್ಠಲದಾಸ್ ಕಾಮತ್, ಷಣ್ಮುಖ ಕೋಳಿವಾಡ, ಗಿರೀಶ ಪಟ್ಟಣಶೆಟ್ಟಿ, ವೆಂಕಟೇಶ ಪ್ರಭು, ರಾಹುಲ ಬೆಳಗಲಿ ಹಾಗೂ ಮುದ್ರಣ ಮತ್ತು ವಿದ್ಯುನ್ಮಾನ ಮಾಧ್ಯಮಗಳ ಪ್ರತಿನಿಧಿಗಳು, ಧಾರವಾಡದ ಪತ್ರಕರ್ತರು ಭಾಗವಹಿಸಿದ್ದರು.

ವಾರ್ತಾ ಇಲಾಖೆಯ ಸಿಬ್ಬಂದಿ ಕಾವ್ಯಾ ಗೌಡ ಪ್ರಾರ್ಥಿಸಿದರು. ರವಿ ಕುಲಕರ್ಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವರದಿ :ನಿತೀಶಗೌಡ ತಡಸ ಪಾಟೀಲ್

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!