ಬೆಳಗಾವಿ: ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕುಂದಾನಗರಿ ಬೆಳಗಾವಿಯಲ್ಲಿ ಪೊಲೀಸರು ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಸೂಚನೆ ಹಾಗೂ ರಸ್ತೆ ಸುರಕ್ಷಾ ಸಮಿತಿಯ ನಿರ್ದೇಶನಗಳಂತೆ ಬೆಳಗಾವಿ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಮೋಟರ್ ವಾಹನ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುತ್ತಿದೆ.
ಡಿಸೆಂಬರ್ 22 ರಿಂದ 28 ರವರೆಗೆ ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ತಪ್ಪಿತಸ್ಥ ಚಾಲಕರ ವಿರುದ್ಧ ಒಟ್ಟು 107 ಪ್ರಕರಣಗಳನ್ನು ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ. ವಿಶೇಷ ಕಾರ್ಯಾಚರಣೆ ಮುಂದುವರೆದಿದೆ.




