ಹುಬ್ಬಳ್ಳಿ: ಮರ್ಯಾದೆ ಗೇಡು ಹತ್ಯೆ ತಡೆಗೆ ಮಾನ್ಯ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಎಂದು ರಾಜ್ಯದ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ಹೇಳಿದರು.
ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಗರ್ಭಿಣಿ ಮಾನ್ಯಾ ಮರ್ಯಾದೆ ಹತ್ಯೆ ಪ್ರಕರಣದ ಹಿನ್ನೆಲೆ ಇಂದು ಗ್ರಾಮಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಪರಿಹಾರದ ೧೬ ಲಕ್ಷದ ಚೆಕ್ ವಿತರಿಸಿ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಇಂತಹ ಮಾರ್ಯಾದೆ ಗೇಡು ಹತ್ಯೆ ತಡೆಗೆ ಉಗ್ರವಾದ ಕಾನೂನು ತರಲು ಮುಂದಿನ ಅಧಿವೇಶನದಲ್ಲಿ ಪ್ರಯತ್ನ ಮಾಡಲಾಗುವುದು. ಮಹಿಳೆಯ ಇಚ್ಚೆಯ ವಿರುದ್ದವಾಗಿ ವಿವಾಹ ಆಗಬಾರದು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅವಳ ಆಸೆಯಂತೆ ಮದುವೆ ಆಗಬೇಕು ಎಂಬುದು ಹಿಂದೂ ಕೋಡ್ ಬಿಲ್ ಹೇಳುತ್ತದೆ. ಈ ಘಟನೆಯಲ್ಲಿ ಮೂಲಭೂತ ಹಕ್ಕಿನ್ನ ಉಲ್ಲಂಘನೆ ಆಗಿದೆ. ಕೊಲೆ ಮಾಡಿದವರ ವಿರುದ್ಧ ತೀಕ್ಷ್ಣವಾಗಿ ಕ್ರಮ ಕೈಗೊಳ್ಳಲಾಗುವುದು, ಇಂತಹ ಘಟನೆಗಳನ್ನು ನಮ್ಮ ಸರ್ಕಾರ ಸಹಿಸೋದಿಲ್ಲ ಎಂದರು.

ಈಗಾಗಲೇ ವಿಶೇಷವಾಗಿ ಅನ್ಯಾಯಕ್ಕೆ ಒಳಗಾದ ಕುಟುಂಬಕ್ಕೆ ೧೬ ಲಕ್ಷದ ಪರಿಹಾರದ ಚೆಕ್ ನೀಡಲಾಗಿದೆ. ಈ ಘಟನೆ ಅತ್ಯಂತ ಅಮಾನವೀಯ ಕೃತ್ಯ, ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ, ಮನು ವಾದದ ಮನಸ್ಸುಗಳನ್ನು ಹತ್ತಿಕ್ಕಬೇಕು. ಮರ್ಯಾದೆ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದವರು, ಅದಕ್ಕೆ ಉತ್ತೇಜನ ಕೊಟ್ಟವರ ವಿರುದ್ಧ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆಯೆಂದರು.
ಈಗಾಗಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆಗೆ ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕ್ರಮಕ್ಕೆ ಸೂಚನೆ ಕೊಡಲಾಗಿದೆ. ಇದು ಮರ್ಯಾದೆ ಹತ್ಯೆ ಮಾತ್ರವಲ್ಲ, ಉಗ್ರವಾದ ಕೊಲೆ, ಇಂತಹ ಘಟನೆಗಳು ನಮ್ಮ ರಾಜ್ಯದಲ್ಲಿ ಹೆಚ್ಚಾಗಿ ನಡೆಯುತ್ತಿರಲಿಲ್ಲ. ಈ ರೀತಿಯಾಗಿ ಕೆಲಸ ಮಾಡಿದವರ, ಅದಕ್ಕೆ ಬೆಂಬಲಿಸುವ ವ್ಯಕ್ತಿಗಳನ್ನು ಸರ್ಕಾರ ಬಿಡುವುದಿಲ್ಲ. ಈ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ತಿಳಿಸಿದರು.
ಸಂತ್ರಸ್ಥ ಕುಟುಂಬಕ್ಕೆ ಧೈರ್ಯ ಮತ್ತು ಸಾಂತ್ವನ ಹೇಳುವಂತೆ ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಕುಟುಂಬಕ್ಕೆ ಅಗತ್ಯ ನೆರವು ನೀಡಲಾಗುವುದು. ರಾಜ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಏನೂ ಕ್ರಮ ಕೈಗೊಳ್ಳಬೇಕೆಂಬ ಬಗ್ಗೆ ಸಿಎಂ, ಗೃಹ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದೆಂದರು.
ಘಟನೆ ನಡೆದ ಕೂಡಲೇ ಪರಿಶಿಷ್ಟ ಜಾತಿ, ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿಯಲ್ಲಿ ಸಂತ್ರಸ್ಥರಿಗೆ ಪರಿಹಾರ ಕೊಡುವಂತೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಸೂಚನೆ ಕೊಟ್ಟಿದ್ದೆ. ಈ ಘಟನೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರೇ ಅಂತವರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಮಾನ್ಯ ಪಾಟೀಲ್ ಹೆಸರಿನಲ್ಲಿ ಪ್ರತ್ಯೇಕ ಮಸೂದೆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಸಚಿವರೊಂದಿಗೆ ಶಾಸಕರಾದ ಪ್ರಸಾದ ಅಬ್ಬಯ್ಯ, ಎನ್.ಎಚ್.ಕೋನರೆಡ್ಡಿ, ಎಫ್.ಎಚ್.ಜಕ್ಕಪ್ಪನವರ, ಜಿಲ್ಲಾಧಿಕಾರಿ ದಿವ್ಯ ಪ್ರಭು, ವಿವಿಧ ದಲಿತ ಸಂಘಟನೆಗಳ ಮುಖಂಡರಾದ ಸುರೇಶ ಖಾನಾಪುರ, ಪರಮೇಶಿ ಕಾಳೆ ಸಹಿತ ಹಲವರು ಇದ್ದರು.
ತದನಂತರ ಸಚಿವರು ವಿವೇಕಾನಂದ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು.
ವರದಿ:ಸುಧೀರ್ ಕುಲಕರ್ಣಿ




