ವಿಜಯಪುರ: ಖಾಸಗಿ ಸಹಭಾಗಿತ್ವದ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ವಿಜಯಪುರದಲ್ಲಿ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.
ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಇಂದು ಮತ್ತಷ್ಟು ತೀವ್ರಗೊಂಡಿದೆ. ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ.
ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಪ್ರತಿಭಟನಾಕಾರರು ಇಂದು ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದಿದೆ.
ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮೀಜಿ ಹಾಗೂ ಪೊಲೀಸರ ನಡುವೆ ತಳ್ಳಾಟವಾಗಿದ್ದು, ಈ ವೇಳೆ ಸಿಟ್ಟಿಗೆದ್ದ ಸ್ವಾಮೀಜಿ ಏಕಾಏಕಿ ಪಿಎಸ್ ಐ ಹಾಗೂ ಪೊಲೀಸ್ ಸಿಬ್ಬಂದಿ ಮೇಲೆ ಕಪಾಳಮೋಕ್ಷ ಮಾಡಿದ್ದಾರೆ.
ಕರ್ತವ್ಯ ನಿರತ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಯ ಕಪಾಳಕ್ಕೆ ಸ್ವಾಮೀಜಿ ಹೊಡೆದಿರುವ ಘಟನೆ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.




