ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಆರೋಪ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪುರಸ್ಕರಿಸಿದೆ.
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿಗೆ ಮುಡಾ ಕೇಸ್ ನಲ್ಲಿ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ರ್ಜುನಸ್ವಾಮಿ ಹಾಗೂ ಜಮೀನು ಮಾಲೀಕ ದೇವರಾಜು ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ನ್ನು ಕೋರ್ಟ್ ಮಾನ್ಯಮಾಡಿದೆ. ಈ ಹಿನ್ನೆಲೆಯಲ್ಲಿ ಈ ನಾಲ್ವರ ವಿರುದ್ಧ ಮುಡಾ ಕೇಸ್ ನಲ್ಲಿ ಯಾವುದೇ ತನಿಖೆ ನಡೆಸುವಂತಿಲ್ಲ. ಈ ಮೂಲಕ ಜಾರಿ ನಿರ್ದೇಶನಾಲಯ (ಇಡಿ) ತನಿಖೆಗೂ ಹಿನ್ನಡೆಯಾದಂತಾಗಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇತರರ ವಿರುದ್ಧ ದಾಖಲಾಗಿರುವ ಕೇಸ್ ತನಿಖೆಯನ್ನು ಮುಂದುವರೆಸಬಹುದು ಎಂದು ಕೋರ್ಟ್ ಆದೇಶ ನೀಡಿದೆ.
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ, ಜಮೀನು ಮಾಲೀಕ ದೇವರಾಜು ವಿರುದ್ಧ ಯಾವುದೇ ಸೂಕ್ತ ಸಾಕ್ಷಾಧಾರಗಳು ಇಲ್ಲ ಎಂದು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಗೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಯಾವುದೇ ಸಾಕ್ಷಾಧಾರಗಳಿಲ್ಲದ ಹಿನ್ನೆಲೆಯಲ್ಲಿ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿದ್ದು, ಬಿ ರಿಪೋರ್ಟ್ ಪುರಸ್ಕರಿಸಲಾಗಿದೆ ಎಂದು ತೀರ್ಪು ನೀಡಿದೆ.
ಏನಿದು ಮುಡಾ ಹಗರಣ?
ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಹೆಸರಿನಲ್ಲಿದ್ದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂ. 464ರಲ್ಲಿ 3 ಎಕರೆ 16 ಗುಂಟೆ ಜಮೀನನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಬಳಸಿಕೊಂಡಿತ್ತು.
ಇದಕ್ಕೆ ಪರಿಹಾರದ ಬದಲಾಗಿ ವಿಜಯನಗರದ 3 ಮತ್ತು 4ನೇ ಹಂತದಲ್ಲಿ ಪಾರ್ವತಿ ಸಿದ್ದರಾಮಯ್ಯ ಅವರಿಗೆ 14 ನಿವೇಶನಗಳನ್ನು ಮಂಜೂರು ಮಾಡಲಾಗಿತ್ತು.
ಇದು ರಾಜಕೀಯ ಕೆಸರೆರೆಚಾಟಕ್ಕೆ ಕಾರಣವಾಗಿ ಪ್ರಕರಣ ದಾಖಲಾಗಿತ್ತು. ಇದರಿಂದ ತನಗೆ ಪ್ರಾಧಿಕಾರ ನೀಡಿದ್ದ 14 ಸೈಟುಗಳನ್ನು ವಾಪಸ್ ನೀಡುವುದಾಗಿ ಪಾರ್ವತಿ ಸಿದ್ದರಾಮಯ್ಯ ಘೋಷಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಪತ್ನಿಪಾರ್ವತಿ, ಸಂಬಂಧಿ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನಿನ ಮಾಲೀಕರ ದೇವರಾಜು ವಿರುದ್ಧ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದರು.
ಈ ನಾಲ್ವರು ಅಕ್ರಮ ಎಸಗಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ಲೋಕಾಯುಕ್ತ ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಬಿ ರಿಪೋರ್ಟ್ ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನ್ಯಾಯಾಲಯಕ್ಕೆ ತಕರಾರು ಅರ್ಜಿ ಸಲ್ಲಿಸಿದ್ದರು.




