ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕವಾಗಿ ಚಿಕಿತ್ಸೆ, ವೈದ್ಯಕೀಯ ಉಪಚಾರ ಒದಗಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ತಾಲೂಕಾ ಮಟ್ಟದ ಆಸ್ಪತ್ರೆ ಮೇಲ್ದರ್ಜೆಗೇರಿಸುವಂತೆ ಜಿಲ್ಲಾಧಿಕಾರಿಗಳಲ್ಲಿ ಮನವಿಯ ಕುರಿತು ಸರಕಾರಕ್ಕೆ ಗಮನಕ್ಕೆ ತಂದು ಕ್ರಮ ವಹಿಸಲಾಗುವುದು ಎಂದು ಹೇಳಿದರು.
ಬಿಸಿಎಂ ಹಾಸ್ಟೇಲ್‍ಗೆ ಭೇಟಿ ನೀಡಿ ವಸತಿ ನಿಲಯದಲ್ಲಿರುವ ಮಕ್ಕಳಿಗೆ ಸರಿಯಾದ ಸಮಯಕ್ಕೆ ನಿಗದಿತ ಆಹಾರ ಪೂರೈಕೆ, ಅಗತ್ಯ ಸೌಲಭ್ಯ ಒದಗಿಸುತ್ತಿರುವ ಕುರಿತು ಮಕ್ಕಳ ಪಾಲಕರಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಮಕ್ಕಳಿಗೆ ಗುಣಮಟ್ಟದ ಆಹಾರ, ಶುದ್ಧ ಕುಡಿಯುವ ನೀರು ಒದಗಿಸಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಸಮರ್ಪಕವಾಗಿ ವಸತಿ ನಿಲಯ ನಿರ್ವಹಣೆ ಮಾಡುವಂತೆ ಅವರು ಸೂಚನೆ ನೀಡಿದರು.
ಚಡಚಣ ತಾಲೂಕಾ ಕಚೇರಿಯಲ್ಲಿ ಭೂಮಿ ಕೇಂದ್ರಕ್ಕೆ ಭೇಟಿ ನೀಡಿದ ಅವರು ಹಕ್ಕು ಬದಲಾವಣೆ, ಜೆ ನಮೂನೆಗಳು 8ದಿನಗಳಲ್ಲಿ ಮತ್ತು ನೋಟಿಸ್ ರಹಿತ ಹಕ್ಕು ಬದಲಾವಣೆಗಳು 3 ದಿನಗಳಲ್ಲಿ ಹಾಗೂ ಪೌತಿ ಖಾತೆಗಳು, ಇ-ಪೌತಿ ತಂತ್ರಾಂಶದಲ್ಲಿ ಅಳವಡಿಸಲಾಗಿರುವ ಕುರಿತು ಶಿರಸ್ತೇದಾರ ಆರ್.ಎಸ್.ಚವ್ಹಾಣ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಚಡಚಣ ಪಟ್ಟಣದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಮಕ್ಕಳಿಗೆ ಪೌಷ್ಠಿಕ ಆಹಾರ ಸಮರ್ಪಕವಾಗಿ ಪೂರೈಕೆ ಮಾಡಬೇಕು. ಯಾವುದೇ ದೂರುಗಳಿಗೆ ಆಸ್ಪದ ನೀಡದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನಂತರ ತಾಲೂಕಾ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಕಚೇರಿಯ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗಿ ಸಾರ್ವಜನಿಕರಿಗೆ ನಿಗದಿತ ಸಮಯದಲ್ಲಿ ಕೆಲಸಗಳನ್ನು ಮಾಡಿಕೊಡಬೇಕು. ನಿಗದಿತ ಅವಧಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು. ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ ಸಕಾಲದಲ್ಲಿ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.




