ಚೇಳೂರು : ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಫುಟ್‌ಪಾತ್ ಮೇಲೆ ಅನಧಿಕೃತವಾಗಿ ತಲೆ ಎತ್ತಿರುವ ಮಾಂಸದ ಅಂಗಡಿಗಳಿಂದ ಸಾರ್ವಜನಿಕರ ಸಂಚಾರಕ್ಕೆ ಮತ್ತು ದ್ವಿಚಕ್ರ ವಾಹನ ಸವಾರರಿಗೆ ತೀವ್ರ ತೊಂದರೆಯಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡು ಈ ಅಂಗಡಿಗಳನ್ನು ತೆರವುಗೊಳಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ರಸ್ತೆ ಬದಿಯಲ್ಲೇ ಎಲ್ಲೆಂದರಲ್ಲಿ ಮಾಂಸದ ತ್ಯಾಜ್ಯವನ್ನು ಬಿಸಾಡುತ್ತಿರುವುದರಿಂದ ಈ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದೆ. ಮಾಂಸದ ತುಂಡುಗಳಿಗಾಗಿ ನಾಯಿಗಳು ರಸ್ತೆಯಲ್ಲೇ ಕಿತ್ತಾಡುತ್ತಾ ಓಡಾಡುವುದರಿಂದ ವಾಹನ ಸವಾರರು ಅಪಘಾತಕ್ಕೀಡಾಗುತ್ತಿದ್ದಾರೆ.
ವಿಶೇಷವಾಗಿ ನಾಯಿಗಳು ಏಕಾಏಕಿ ರಸ್ತೆಗೆ ನುಗ್ಗಿದಾಗ ದ್ವಿಚಕ್ರ ವಾಹನ ಸವಾರರು ನಿಯಂತ್ರಣ ತಪ್ಪಿ ಬಿದ್ದು ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ. ಇದರಿಂದಾಗಿ ಆರೋಗ್ಯ ಕೇಂದ್ರಕ್ಕೆ ಬರುವ ರೋಗಿಗಳು ಮತ್ತು ವೃದ್ಧರು ರಸ್ತೆಯಲ್ಲಿ ಓಡಾಡಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ವಿಪರ್ಯಾಸವೆಂದರೆ, ಚೇಳೂರು ತಹಸೀಲ್ದಾರರು ಇದೇ ಸರ್ಕಾರಿ ಆಸ್ಪತ್ರೆಯ ಹಿಂಭಾಗದಲ್ಲೇ ವಾಸಿಸುತ್ತಿದ್ದು, ಪ್ರತಿದಿನ ಇದೇ ರಸ್ತೆಯಲ್ಲೇ ಓಡಾಡುತ್ತಿದ್ದಾರೆ. ಆದರೂ ತಮ್ಮ ಕಣ್ಣೆದುರೇ ನಡೆಯುತ್ತಿರುವ ಈ ಅವ್ಯವಸ್ಥೆಯ ವಿರುದ್ಧ ಅವರು ಯಾವುದೇ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಇದರ ಜೊತೆಗೆ ಪೊಲೀಸ್ ಅಧಿಕಾರಿಗಳು ಸಹ ದಿನನಿತ್ಯ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದರೂ, ಫುಟ್‌ಪಾತ್ ಒತ್ತುವರಿ ಹಾಗೂ ಸಾರ್ವಜನಿಕರಿಗೆ ಆಗುತ್ತಿರುವ ಕಿರುಕುಳವನ್ನು ಗಮನಿಸದೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಗ್ರಾಮ ಪಂಚಾಯಿತಿ ಕಚೇರಿಯು ಕೇವಲ 300 ಮೀಟರ್ ದೂರದಲ್ಲಿದ್ದರೂ, ಈ ಅನಧಿಕೃತ ಚಟುವಟಿಕೆಗಳು ರಾಜಾರೋಷವಾಗಿ ನಡೆಯುತ್ತಿವೆ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸೇರಿದಂತೆ ಜವಾಬ್ದಾರಿಯುತ ಅಧಿಕಾರಿಗಳು ಈ ಬಗ್ಗೆ ಕಣ್ಣು ಮುಚ್ಚಿ ಕುಳಿತಿರುವುದು ಯಾಕೆ ಎಂಬುದು ಸ್ಥಳೀಯರ ಪ್ರಶ್ನೆಯಾಗಿದೆ.
ತಿಂಗಳ ಮಾಮೂಲಿಗಾಗಿ ಇಂತಹ ಅನಧಿಕೃತ ಅಂಗಡಿಗಳಿಗೆ ಅವಕಾಶ ನೀಡಲಾಗಿದೆಯೇ ಎಂಬ ಸಂಶಯವನ್ನು ನಿವಾಸಿಗಳು ವ್ಯಕ್ತಪಡಿಸಿದ್ದಾರೆ.
ಇದು ಕರ್ತವ್ಯ ನಿರ್ವಹಣೆಯಲ್ಲಿ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.
ಸಾರ್ವಜನಿಕರ ಸುರಕ್ಷತೆ ಮತ್ತು ನೈರ್ಮಲ್ಯದ ದೃಷ್ಟಿಯಿಂದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಸಿಇಒ) ತಕ್ಷಣವೇ ಮಧ್ಯಪ್ರವೇಶಿಸಬೇಕು.
ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ, ಅನಧಿಕೃತವಾಗಿರುವ ಮಾಂಸದ ಅಂಗಡಿಗಳನ್ನು ತೆರವುಗೊಳಿಸುವ ಮೂಲಕ ಸುಗಮ ಸಂಚಾರಕ್ಕೆ ಮತ್ತು ಸಾರ್ವಜನಿಕರ ನೆಮ್ಮದಿಗೆ ಅನುವು ಮಾಡಿಕೊಡಬೇಕೆಂದು ಚೇಳೂರು ನಾಗರಿಕರು ಭಾರತ ವೈಭವ ಪತ್ರಿಕೆಯ ಹಾಗೂ ಚಾನೆಲ್ ಮೂಲಕ ಮನವಿ ಮಾಡಿದ್ದಾರೆ.




