ಬೆಳಗಾವಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಗೃಹ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಶೇಷ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರಮುಖವಾಗಿ ಮಹಿಳೆಯರ ಸುರಕ್ಷತೆಗಾಗಿ ಇರುವ ‘ಅಕ್ಕ ಪಡೆ’ಯ ಕಾರ್ಯವೈಖರಿ, ಇಂದಿನ ದಿನಗಳಲ್ಲಿ ಹೆಚ್ಚುತ್ತಿರುವ ಸೈಬರ್ ಅಪರಾಧಗಳು (Cyber Space) ಹಾಗೂ ಯುವಜನತೆಯನ್ನು ಕಾಡುತ್ತಿರುವ ಮಾದಕ ವ್ಯಸನ (Drug Abuse) ತಡೆಗಟ್ಟುವ ಕುರಿತು ತಜ್ಞರು ಮತ್ತು ಅಧಿಕಾರಿಗಳು ಸುದೀರ್ಘ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅಧಿಕಾರಿಗಳು, ಮಹಿಳೆಯರು ಮತ್ತು ಮಕ್ಕಳು ಸೈಬರ್ ವಂಚನೆಗೆ ಬಲಿಯಾಗದಂತೆ ಎಚ್ಚರ ವಹಿಸಬೇಕು ಹಾಗೂ ಡ್ರಗ್ಸ್ನಂತಹ ಮಾರಕ ವ್ಯಸನಗಳಿಂದ ದೂರವಿದ್ದು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಗೃಹ ಇಲಾಖೆಯ ಪ್ರತಿನಿಧಿಗಳು ‘ಅಕ್ಕ ಪಡೆ’ಯ ತುರ್ತು ಸೇವೆಗಳನ್ನು ಸಾರ್ವಜನಿಕರು ಹೇಗೆ ಸದುಪಯೋಗಪಡಿಸಿಕೊಳ್ಳಬಹುದು ಎಂಬ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ನ ಹಿರಿಯ ಅಧಿಕಾರಿಗಳು, ಪೊಲೀಸ್ ಇಲಾಖೆಯ ಪ್ರಮುಖರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವರದಿ: ಮಹಾಂತೇಶ್ ಎಸ್ ಹುಲಿಕಟ್ಟಿ




