ಬೆಳಗಾವಿ : ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಬೇಕೆಂದು ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು.
ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು ಮತ್ತು ಸಂಘಟನೆಯ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಪದವೀಧರ ಯುವಕರು ಕೆಲಸವಿಲ್ಲದೆ ಕಂಗಾಲಾಗಿದ್ದಾರೆ. ಹಲವು ವರ್ಷಗಳಿಂದ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿ ಬಿದ್ದಿದ್ದರೂ ಸರ್ಕಾರ ನೇಮಕಾತಿ ಪ್ರಕ್ರಿಯೆಗೆ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಸಂಚಾರಕ್ಕೆ ಅಡ್ಡಿಪಡಿಸಿದ ಪ್ರತಿಭಟನಾಕಾರರು, ಕೂಡಲೇ ನೇಮಕಾತಿ ಅಧಿಸೂಚನೆ ಹೊರಡಿಸದಿದ್ದರೆ ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯ ಹಿನ್ನೆಲೆಯಲ್ಲಿ ವೃತ್ತದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.
ವರದಿ : ಮಹಾಂತೇಶ್ ಎಸ್ ಹುಲಿಕಟ್ಟಿ




