ಭಾಲ್ಕಿ ತಾಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬಲಗೈ ನಾಯಕರ ಮನವಿ
ಭಾಲ್ಕಿ : ರಾಜ್ಯ ಸರ್ಕಾರವು ಶೇಕಡ 17+7ರ ಮೀಸಲಾತಿ ಪ್ರಮಾಣಕ್ಕೆ ರಾಜ್ಯ ಉಚ್ಚ ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಸಾಮಾನ್ಯ ವರ್ಗದವರು ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಬೇಕೆಂದು ಹೋರಾಟ ರೂಪಿಸಿದ ಹಿನ್ನೆಲೆಯಲ್ಲಿ ದಿನಾಂಕ: 27.02.2026ರಂದು ಶೇಕಡ 15+3ರ ಪ್ರಮಾಣದಲ್ಲಿ ಒಳಮೀಸಲಾತಿ ರಹಿತ” ನೇಮಕ ಮಾಡಲು ಆದೇಶ ಹೊರಡಿಸಿ ಗೆಜೆಟ್‌ನಲ್ಲಿ ಪಕಟಿಸಿರುತ್ತದೆ. ಆದರೆ, 101 ಜಾತಿಗಳಲ್ಲಿ ಒಂದು ಸಮುದಾಯವು ಶೇಕಡ 15+3 ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬೇಕೆಂದು ಹೋರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ: 27.03.2026ರಂದು ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯನ್ನು ಏರ್ಪಡಿಸಲಾಗಿದ್ದು, ಸದರಿ ಸಭೆಯಲ್ಲಿ ಶೇಕಡ 15+3ರ ಮೀಸಲಾತಿಯಲ್ಲಿ ಒಳಮೀಸಲಾತಿಯನ್ನು ಅಳವಡಿಸಬಾರದೆಂದು ತಪ್ಪಿದ್ದಲ್ಲಿ ಮುಂದೆ ಆಗುವ ಎಲ್ಲಾ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟವು ಸರ್ಕಾರಕ್ಕೆ ಈ ಮೂಲಕ ಸ್ಪಷ್ಟವಾಗಿ ಎಚ್ಚರಿಸುತ್ತದೆ ಹಾಗೂ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸುತ್ತದೆ ಎಂದು ಬಲಗೈ ಸಮುದಾಯದ ನಾಯಕರು ತಿಳಿಸಿದ್ದಾರೆ.

1. ಅವೈಜ್ಞಾನಿಕ, ಅಪೂರ್ಣ, ದೋಷಪೂರಿತ ಹಾಗೂ ಪಕ್ಷಪಾತದಿಂದ ಕೂಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಆಯೋಗದ ವರದಿಯನ್ನು ರಾಜ್ಯ ಸರ್ಕಾರವು ತಿರಸ್ಕರಿಸುವುದು.
2. ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಕುಟುಂಬಗಳ ಸಮೀಕ್ಷೆಯ ಅಂಕಿಅಂಶಗಳೊಂದಿಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ರವರ ಆಯೋಗದ ಅಂಕಿ ಅಂಶಗಳನ್ನು ಹೋಲಿಕೆ ಮಾಡುವುದು. ವ್ಯತ್ಯಾಸಗಳು ಕಂಡುಬಂದಲ್ಲಿ ಪರಿಶಿಷ್ಟ ಜಾತಿಯ ಎಲ್ಲಾ ಕುಟುಂಬಗಳ ಸಮೀಕ್ಷೆಯನ್ನು ಮತ್ತೊಮ್ಮೆ ಕೈಗೊಳ್ಳುವುದು.
3. ರಾಜ್ಯ ಸರ್ಕಾರವು ದಿನಾಂಕ: 03.09.2025ರಂದು ಯಾವುದೇ ಮಾನದಂಡವನ್ನು ಅನುಸರಿಸದೇ ಅವೈಜ್ಞಾನಿಕವಾಗಿ ಹೊರಡಿಸಿರುವ ಮೀಸಲಾತಿ ಆದೇಶವನ್ನು ಹಿಂಪಡೆಯುವುದು.
4. ಸಮಾಜ ಕಲ್ಯಾಣ ಇಲಾಖೆಯ ಸುತ್ತೋಲೆ ಸಂಖ್ಯೆ ಸಕಇ/08/ಎಸ್ಎಲ್ ಪಿ/2024 (ಭಾಗ-5) ದಿನಾಂಕ: 08.10.2025ರ ನಿರ್ದೇಶನದಂತೆ ಜಾತಿ ಪ್ರಮಾಣ ಪತ್ರಗಳನ್ನು ಪ್ರವರ್ಗ – A. B ಮತ್ತು C ಎಂದು ವರ್ಗೀಕರಿಸಿರುವುದನ್ನು ಹಿಂಪಡೆದು ಮೂಲ ಜಾತಿಗಳನ್ನು ನಮೂದಿಸಿ ಜಾತಿ ಪ್ರಮಾಣ ಪತ್ರಗಳನ್ನು ನೀಡಲು ಸೂಕ್ತ ಆದೇಶ ಹೊರಡಿಸುವುದು.
5. ಪರಿಶಿಷ್ಟ ಜಾತಿ ಸಮುದಾಯಕ್ಕೆ ಈಗಾಗಲೇ ನೀಡಿರುವ ಖಾಯಂ ಜಾತಿ ಪ್ರಮಾಣ ಪತ್ರಗಳನ್ನು ಹೊಸ ಜಾತಿ ಪ್ರಮಾಣ ಪತ್ರಗಳೊಂದಿಗೆ ಪರಿಗಣಿಸಲು ಸೂಕ್ತ ಆದೇಶ ಹೊರಡಿಸುವುದು.
6. ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಸೇರಿರುವ 63 ಜಾತಿಗಳನ್ನು ಬಲಗೈ ಗುಂಪಿನಲ್ಲಿ ಉದ್ಯೋಗ, ಶಿಕ್ಷಣ ಮತ್ತು ಇತರೆ ಸೌಲಭ್ಯ ಪಡೆಯಲು ಅಧಿಸೂಚನೆ ಹೊರಡಿಸುವುದು.
7. ಚಿತ್ರದುರ್ಗ ಜಿಲ್ಲೆಯಲ್ಲಿ ಹೊಲಯ ಸಮುದಾಯ ಕೇವಲ 223 ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಲ್ಲಿ ದಾಖಲಿಸಿರುವುದನ್ನು ಮರು ಪರಿಶೀಲಿಸಿ ಉದ್ದೇಶ ಪೂರ್ವಕವಾಗಿ ಬಲಗೈ ಸಮುದಾಯದ ಜನಸಂಖ್ಯೆಯನ್ನು ಕಡಿಮೆ ಮಾಡಿರುವ ಆಯೋಗದ ಅಧ್ಯಕ್ಷರು ಹಾಗೂ ಅಧಿಕಾರಿಗಳ ಮೇಲೆ ದೌರ್ಜನ್ಯ ತಡೆ ಕಾಯ್ದೆಯನ್ವಯ ಮೊಕದ್ದಮೆ ದಾಖಲಿಸಲು ವಿಶೇಷ ತನಿಖಾ ತಂಡವನ್ನು ನೇಮಕ ಮಾಡುವುದು.
ಪತ್ರಿಕಾ ಗೋಷ್ಠಿಯಲ್ಲಿ ಪ್ರದೀಪ ಜಂಜಿರೆ, ವಿಶ್ವನಾಥ ಮೊರೆ, ಲಕ್ಷ್ಮಣ ಗುಪ್ತಾ, ಪ್ರಶಾಂತ ಕೋಟಗಿರಾ, ರಾಜಕುಮಾರ ಮೊರೆ, ವಿಲಾಸ ಮೊರೆ, ಕೀರ್ತಿರತನ ಸೋನಾಳೆ, ಸುನಿಲ್ ಕಾಂಬ್ಳೆ,ಮನೋಹರ ಸಂತಪುರೆ ಇನ್ನಿತರರು ಇದ್ದರು.
ವರದಿ:ಸಂತೋಷ ಬಿಜಿ ಪಾಟೀಲ




