ಬೆಳಗಾವಿ: ನಗರದ ಶಿವಾಜಿ ನಗರದಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಮಾರ್ಕೆಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳಾ ಆರೋಪಿಯನ್ನು ಬಂಧಿಸಿ, ಸುಮಾರು 9.27 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶಿವಾಜಿ ನಗರದ ನಿವಾಸಿ ಶ್ರೀಮತಿ ಲಲಿತಾ ಪ್ರಕಾಶ ಮಮದಾಪೂರ ಎಂಬುವವರು ತಮ್ಮ ಮನೆಯಲ್ಲಿ ಕಳ್ಳತನವಾಗಿರುವ ಬಗ್ಗೆ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಳೆದ ಡಿಸೆಂಬರ್ 2025 ರಿಂದ ಫೆಬ್ರವರಿ 2026ರ ನಡುವಿನ ಅವಧಿಯಲ್ಲಿ ಮನೆಯಲ್ಲಿದ್ದ ಚಿನ್ನದ ಆಭರಣಗಳು ಕಳವಾಗಿದ್ದವು. ಈ ಬಗ್ಗೆ ಅಪರಾಧ ಸಂಖ್ಯೆ 46/2026 ರಡಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆ ಕೈಗೊಂಡಿದ್ದರು.
ಬೆಳಗಾವಿ ಪೊಲೀಸ್ ಆಯುಕ್ತರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಿದ್ದ ಮಾರ್ಕೆಟ್ ಠಾಣೆಯ ಇನ್ಸ್ಪೆಕ್ಟರ್ ಜೆ. ಎಮ್. ಕಾಲಿಮಿರ್ಚಿ ಹಾಗೂ ತಂಡವು ಖಚಿತ ಮಾಹಿತಿ ಮೇರೆಗೆ ಸುರೇಖಾ ಬಸವರಾಜ ತಲವಾರ (40) ಎಂಬಾಕೆಯನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯಿಂದ ಒಟ್ಟು 68.74 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮಾರುಕಟ್ಟೆ ಮೌಲ್ಯ ಸುಮಾರು 9,27,990/- ರೂಪಾಯಿಗಳು ಎಂದು ಅಂದಾಜಿಸಲಾಗಿದೆ.
ಪೊಲೀಸ್ ತಂಡಕ್ಕೆ ಶ್ಲಾಘನೆ:
ಸಹಾಯಕ ಪೊಲೀಸ್ ಆಯುಕ್ತರಾದ ಸಂತೋಷ ಸತ್ಯನಾಯಿಕ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಎಸ್ಐ ವಿಠ್ಠಲ ಲ ಹಾವಣ್ಣವರ, ಹುಸೇನ ಕೀರೂರ ಹಾಗೂ ಸಿಬ್ಬಂದಿಗಳಾದ ಎಲ್.ಎಸ್. ಕಡೋಲಕರ, ನವೀನಕುಮಾರ ಎ.ಬಿ ಸೇರಿದಂತೆ ಹಲವರು ಭಾಗವಹಿಸಿದ್ದರು. ಯಶಸ್ವಿ ಕಾರ್ಯಾಚರಣೆ ನಡೆಸಿದ ತಂಡದ ಕಾರ್ಯದಕ್ಷತೆಯನ್ನು ಪೊಲೀಸ್ ಆಯುಕ್ತರು ಶ್ಲಾಘಿಸಿದ್ದಾರೆ.
ವರದಿ ಸದಾಶಿವ ಮಹಾಂತೇಶ್ ಎಸ್ ಹುಲಿಕಟ್ಟಿ




