ಮುಂಬೈ: ಮದುವೆಯಾಗುವುದಾಗಿ ಭರವಸೆ ನೀಡಿ ವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 30 ವರ್ಷದ ಐಪಿಎಸ್ ಅಧಿಕಾರಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಮಹಾರಾಷ್ಟ್ರದ ನಾಗ್ಪುರದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಇತ್ತೀಚೆಗೆ ನಾಗ್ಪುರದ ಇಮಾಮ್ವಾಡಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಅವರು ಹೇಳಿದರು.
ದೂರುದಾರರ ಪ್ರಕಾರ, ವೈದ್ಯೆ ಮತ್ತು ಆ ವ್ಯಕ್ತಿ ಸಾಮಾಜಿಕ ಮಾಧ್ಯಮ ವೇದಿಕೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕಕ್ಕೆ ಬಂದಿದ್ದಾರೆ. ಆಗ ಆರೋಪಿಯು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರೆ, ಮಹಿಳೆ ಎಂಬಿಬಿಎಸ್ ಕೋರ್ಸ್ ಓದುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅವರಿಬ್ಬರು ಸ್ನೇಹಿತರಾದ ನಂತರ, ಆರೋಪಿ ಮಹಿಳೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ್ದಾನೆ. ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಆಯ್ಕೆಯಾದ ನಂತರ, ಆರೋಪಿ ಮಹಿಳೆಯಿಂದ ಅಂತರ ಕಾಯ್ದುಕೊಳ್ಳಲು ಮುಂದಾಗಿದ್ದಾನೆ ಮತ್ತು ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಅಧಿಕಾರಿ ಹೇಳಿದರು.
ಆ ವ್ಯಕ್ತಿಯ ಪೋಷಕರು ಕೂಡ ಮಹಿಳೆಗೆ ಸ್ಪಂದಿಸಿಲ್ಲ. ಇದರಿಂದ ಆಕೆ ಅಸಮಾಧಾನಗೊಂಡು ಇಮಾಮ್‌ವಾಡಾ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ.
ಆಕೆಯ ದೂರಿನ ಆಧಾರದ ಮೇಲೆ, ಐಪಿಎಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.