ಬೆಂಗಳೂರು: ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಮೃತಪಟ್ಟಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ಇಂದು 15 -20 ಇಲಾಖೆ ಅಧಿಕಾರಿಗಳ ಜೊತೆಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ವಾಡಿಕೆಗಿಂತ ಶೇಕಡ 22ರಷ್ಟು ಹೆಚ್ಚು ಮಳೆಯಾಗಿದೆ.
ಸೆಪ್ಟೆಂಬರ್ ಅಂತ್ಯದವರೆಗೂ ವಾಡಿಕೆಗಿಂತ ಹೆಚ್ಚು ಮಳೆ ಆಗಲಿದೆ. ರಾಜ್ಯದಲ್ಲಿ ಮಳೆಯಿಂದ ಇದುವರೆಗೆ 21 ಜನ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.
ಕಾವೇರಿ, ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗಿದೆ. ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸಿಎಂ ಸೂಚನೆ ನೀಡಿದ್ದಾರೆ. ಈಗಾಗಲೇ ರಾಜ್ಯದ ಎಲ್ಲಾ ಜಲಾಶಯಗಳು ಭರ್ತಿಯಾಗಿವೆ.
ಮತ್ತೆ ಮಳೆಯಾದರೆ ನೀರು ಬರುವುದರಿಂದ ಮುಂಜಾಗ್ರತೆ ವಹಿಸಲು ತಿಳಿಸಲಾಗಿದ್ದು, ಜಲಾಶಯಗಳಿಂದ ನಿಯಮಿತವಾಗಿ ನೀರು ಹರಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಅನಗತ್ಯವಾಗಿ ನೀರಿಗೆ ಇಳಿಯುವವರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಲಾಗಿದೆ. ಬೆಂಗಳೂರು ಸೇರಿದಂತೆ ನಗರ ಪ್ರದೇಶದಲ್ಲಿ ರಸ್ತೆ ಜಲಾವೃತ ವಿಚಾರದ ಬಗ್ಗೆ ಚರ್ಚೆ ನಡೆಸಲಾಗಿದೆ. ನೀರು ನಿಲ್ಲದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ ನೀಡಿದ್ದಾರೆ. ಮನೆಗಳು ಶಿಥಿಲವಾಗಿದ್ದರೆ ಅವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಲಾಗಿದೆ ಎಂದರು.