ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಪುನಃ 3 ವಾರ ಕಾಲಾವಕಾಶ ನೀಡಲಾಗಿದೆ.
ಕೋರ್ಟ್ ಗೆ ಭರವಸೆ ನೀಡಿದ ಹೊರತಾಗಿಯೂ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ಪ್ರಕಟಿಸಲು ವಿಫಲವಾದ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
ಇದರೊಂದಿಗೆ ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟಿಸಲು ಏಕ ಸದಸ್ಯ ನ್ಯಾಯಪೀಠ ನೀಡಿದ ಆದೇಶ ಪಾಲಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ಷೇಪಿಸಿ ಮತ್ತೊಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು.
ಈ ಅರ್ಜಿಗಳ ವಿಚಾರಣೆ ಗುರುವಾರ ನ್ಯಾಯಮೂರ್ತಿ ಕಾಮೇಶ್ವರ್ ರಾವ್ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿದ್ದು, ಜಿಪಂ, ತಾಪಂ ಕ್ಷೇತ್ರಗಳ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಮತ್ತೆ ಮೂರು ವಾರ ಕಾಲಾವಕಾಶ ನೀಡಿ ವಿಚಾರಣೆಯನ್ನು ಸೆಪ್ಟೆಂಬರ್ 30ಕ್ಕೆ ಮುಂದೂಡಲಾಗಿದೆ.