ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಜೋರಾಗಿ ನಡೆಯುತ್ತಿದ್ದು, ಈ ನಡುವೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಯೇ ಇಲ್ಲ ಎಂದು ಕಡ್ಡಿಮುರಿದಂತೆ ಹೇಳಿದ್ದಾರೆ.
ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆಯ ವಿಷಯವೇ ಅಪ್ರಸ್ತುತ. ಎಲ್ಲವೂ ಹೈಕಮಾಂಡ್ ನಿರ್ಧಾರದಂತೆ ನಡೆಲಿದೆ ಎಂದರು.
ಒಂದು ವೇಳೆ ಸಂಪುಟ ಪುನರ್‌ರಚನೆ ಅಥವಾ ಯಾವುದೇ ಪ್ರಮುಖ ರಾಜಕೀಯ ನಿರ್ಧಾರ ಕೈಗೊಳ್ಳುವುದಿದ್ದರೂ, ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಪಕ್ಷದ ಹೈಕಮಾಂಡ್ ಸೇರಿ ತೀರ್ಮಾನಿಸುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಒಟ್ಟಾಗಿ ಚರ್ಚಿಸಿ ಅಂತಿಮ ನಿರ್ಧಾರಕ್ಕೆ ಬರುತ್ತಾರೆ. ಎಲ್ಲಕ್ಕಿಂತ ಹೆಚ್ಚಾಗಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ನಿರ್ಣಯವೇ ಅಂತಿಮ ಎಂದು ಎಂಬಿಪಿ ತಿಳಿಸಿದರು.




