ಹಾವೇರಿ : ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಭರ್ಜರಿ ಗೆಲುವು ಕಂಡ ಬಳಿಕ ನೂತನ ಸಂಸತ್ ಸದಸ್ಯರಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆಯ್ಕೆಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜೂನ್ 17ರಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ತಿಳಿಸಿದರು.
ಶಿಗ್ಗಾವಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ನಾನು ಜೂ.17 ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದೇನೆ. ಬಳಿಕ ಶಿಗ್ಗಾವಿ ಉಪಚುನಾವಣೆ ಪ್ರಕ್ರಿಯೆ ಶುರುವಾಗಲಿದೆ. ಆದರೆ, ಬಿಜೆಪಿಯಿಂದ ಯಾರಿಗೆ ಟಿಕೆಟ್ ಕೊಡುತ್ತಾರೆ ಎಂಬ ಬಗ್ಗೆ ಮಾಹಿತಿಯಿಲ್ಲ.
ಹೈಕಮಾಂಡ್ನಿಂದ ಈ ಕ್ಷೇತ್ರದಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದರ ಬಗ್ಗೆ ಸಮೀಕ್ಷೆ ನಡೆಸಿ ಜನಾಭಿಪ್ರಾಯ ಯಾರ ಪರ ಇದೆಯೋ ಅವರಿಗೆ ಪಕ್ಷ ಟಿಕೇಟ್ ನೀಡಲಿದೆ. ನಮ್ಮಲ್ಲೂ ಅನೇಕ ಸಮರ್ಥ ಅಭ್ಯರ್ಥಿಗಳಿದ್ದಾರೆ. ಖಂಡಿತವಾಗಿ ಶಿಗ್ಗಾವಿ ಉಪಚುನಾವಣೆ ಗೆಲ್ಲಲಿದ್ದೇವೆ ಎಂದು ಹೇಳಿದರು.
ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ 100 ದಿನದ ಕಾರ್ಯಕ್ರಮ ಘೋಷಣೆ ಮಾಡಿ, ಅನುಷ್ಠಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಮೈತ್ರಿ ಪಕ್ಷಗಳಿಗೆ ಹಾಗೂ ಆ ಪಕ್ಷಗಳಲ್ಲಿ ಅನುಭವ ಇರುವ ನಾಯಕರಿಗೆ ಆದ್ಯತೆ ಕೊಡುವ ಅಗತ್ಯ ಇತ್ತು. ಅಲ್ಲದೇ, ಹಿಂದಿನ ಸರ್ಕಾರದಲ್ಲಿ ಕೆಲಸ ಮಾಡಿದ ಪ್ರಮುಖರೆಲ್ಲರಿಗೂ ಸಚಿವರನ್ನಾಗಿ ಮುಂದುವರೆಸಲಾಗಿದೆ.
ಹೀಗಾಗಿ ನನಗೆ ಸಚಿವ ಸ್ಥಾನ ತಪ್ಪಿರಬಹುದು. ನನಗೆ ಅನುಭವವಿರುವುದರಿಂದ ಸಂಸದನಾಗಿಯೂ ಅತಿ ಹೆಚ್ಚು ಅಭಿವೃದ್ಧಿ ಕೆಲಸ ಮಾಡುವೆ ಎಂದರು. ನಾಳೆ ಹಾವೇರಿ ಜಿಲ್ಲೆಯ ಡಿಸಿ ಕಚೇರಿಯಲ್ಲಿ ಕೇಂದ್ರದ ಯೋಜನೆಗಳ ಪ್ರಗತಿ ಪರಿಶೀಲನೆ ಮಾಡಲಿದ್ದೇನೆ. ಕೇಂದ್ರದ ಯೋಜನೆಗಳನ್ನು ಚುರುಕುಗೊಳಿಸುವೆ ಎಂದು ಹೇಳಿದರು.