ಬೆಳಗಾವಿ : ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಬಿಜೆಪಿ 20,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ.
ಮೊದಲ ದಿನವಾದ ಇವತ್ತು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದೆ. ಆದರೆ, ಮೊದಲ ದಿನವೇ ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ನಿಲುವಳಿ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ.
ಅಧಿವೇಶನದಲ್ಲಿ ಭಾರೀ ಹಂಗಾಮ ನಡೆಯುವ ಸಾಧ್ಯತೆ ದಟ್ಟವಾಗಿದೆ. ಅನ್ನದಾತರ ಸಮಸ್ಯೆಗಳನ್ನು ಇಟ್ಟುಕೊಂಡೇ ಮೊದಲ ಹಂತದ ಹೋರಾಟಕ್ಕಿಳಿಯಲು ಬಿಜೆಪಿ ಸರ್ವ ಸನ್ನದ್ಧವಾಗಿದೆ.
ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರದ ವೈಫಲ್ಯ ಬಗ್ಗೆ ಪ್ರತ್ಯಾರೋಪ, ಕಬ್ಬು ಬೆಳೆ ವಿಚಾರದಲ್ಲೂ ಕೇಂದ್ರದ ವಿರುದ್ಧ ಆರೋಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ.
ಅಲ್ಲದೆ, ಕಬ್ಬು, ಮೆಕ್ಕೆಜೋಳ ಬೆಳೆಗಾರರ ಬೆನ್ನಿಗೆ ಸರ್ಕಾರ ನಿಂತಿದೆ ಎಂದು ಸಮರ್ಥನೆ ಮಾಡಿಕೊಳ್ಳಲು ಯೋಜಿಸಿದೆ. 1 ಲಕ್ಷ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿ ಜನರ ಕಲ್ಯಾಣ ಕಾರ್ಯಗಳನ್ನು ಹಮ್ಮಿಕೊಂಡಿರುವ ಬಗ್ಗೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ಮಾಡಿದೆ.




