ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ನೀತಿ ಸಂಹಿತೆ ಉಲ್ಲಂಘಿಸಿ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಶಾಸಕ ಎಸ್.ಸುರೇಶ್ ಕುಮಾರ್ ನೇತೃತ್ವದಲ್ಲಿ ಬಿಜೆಪಿ ನಿಯೋಗ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ತೆರಳಿ ದೂರು ನೀಡಿತು.
ಚುನಾವಣಾ ಸಂದರ್ಭದಲ್ಲಿ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ರವರ ಬಗ್ಗೆ ಈ ರೀತಿಯ ಅಸಂವಿಧಾನಿಕ, ಅಪ್ರಬುದ್ಧ ಮತ್ತು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡಿ ಮತದಾರರನ್ನು ನಮ್ಮ ಪಕ್ಷದ ವಿರುದ್ಧ ಎತ್ತಿ ಕಟ್ಟಿ, ಮತದಾರರಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ಮುಖ್ಯವಾಗಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ವಿರುದ್ಧ ದ್ವೇಷ ಭಾವನೆ ಮೂಡಿಸಿ ಚುನಾವಣೆಯಲ್ಲಿ ಅಕ್ರಮ ಲಾಭ ಪಡೆಯುವ ದುರುದ್ದೇಶವನ್ನು ಹೊಂದಿರುತ್ತಾರೆ. ಈ ರೀತಿಯ ಅಸಂಬದ್ಧ ಹೇಳಿಕೆಗಳು ಮಾದರಿ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿರುತ್ತದೆ.
ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಅತ್ಯಂತ ಜವಾಬ್ದಾರಿಯುತ ಸ್ಥಾನದಲ್ಲಿರುತ್ತಾರೆ ಹಾಗೂ ಇವರು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕರು ಕೂಡ ಆಗಿರುತ್ತಾರೆ.
ಈ ರೀತಿಯ ಅಸಂವಿಧಾನಿಕ, ಅಪ್ರಬುದ್ಧ ಮತ್ತು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳ ಮೇಲೆ ಇನ್ನು ಮುಂದೆಯೂ ನಡೆಯುವ ಪ್ರಚಾರ ಕಾರ್ಯಕ್ರಮಗಳಲ್ಲೂ ಪುನರಾವರ್ತಿಸುವ ಸಂಭವವಿರುವುದರಿಂದ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಕಾಂಗ್ರೆಸ್ ಸ್ಟಾರ್ ಪ್ರಚಾರಕ ಪಟ್ಟಿಯಿಂದ ಕೈ ಬಿಡುವಂತೆ ನಿರ್ದೇಶನ ನೀಡಿ, ಇನ್ನು ಮುಂದೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಪಾಲ್ಗೊಳ್ಳದಂತೆ ಈ ಕೂಡಲೇ ಆದೇಶಿಸಬೇಕೆಂದು ಆಗ್ರಹಿಸಿದ್ದಾರೆ.