ಬೆಂಗಳೂರು: ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲು ಸೌಲಭ್ಯ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿರುವುದು ಆರೋಪಿಸಿ ಪ್ರತಿಪಕ್ಷ ಬಿಜೆಪಿ ದಿಢೀರ್ ಪ್ರತಿಭಟನೆ ಸೋಮವಾರ ನಡೆಸಿತು. ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜಮಾಯಿಸಿದ ಪಕ್ಷದ
ಮುಖಂಡರು ಹಾಗೂ ಕಾರ್ಯಕರ್ತರು, ಸಂವಿಧಾನ ವಿರೋಧಿ ಹೇಳಿಕ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು ಇಲ್ಲವೇ ಸಂಪುಟದಿಂದ ಅವರನ್ನು ಸಿಎಂ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು. ಸಂವಿಧಾನ ವಿರೋಧಿ ಕಾಂಗ್ರೆಸ್ ಪಕ್ಷದವೆಂದು ದೂರಿದರು. ಇದೇ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನ ಮಾಡಿ ಆಕ್ರೋಶ ಹೊರ ಹಾಕಿದರು.
ಕಾಂಗ್ರೆಸ್ ಸದಾ ವಿರೋಧಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಪಕ್ಷದ ರಾಜ್ಯ ಉಪಾಧ್ಯಕ್ಷ
ಎನ್.ಮಹೇಶ್ ಮಾತನಾಡಿ ಕಾಂಗ್ರೆಸ್ ಪಕ್ಷ ಯಾವತ್ತೂ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಸಂವಿಧಾನದ ಪರವಿಲ್ಲ. ಇತಿಹಾಸದ ಪುಟದಲ್ಲಿ ಸಾಕಷ್ಟು ನಿದರ್ಶನಗಳಿವೆ ಎಂದು ದೂರಿದರು.
ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಬಗ್ಗೆ ಡಿ.ಕೆ.ಶಿವಕುಮಾರ್ ಅವರಿಗೆ ಗೌರವವಿದ್ದರೆ ಕೂಡಲೇ ರಾಜೀನಾಮೆ ನೀಡಿ, ದೇಶದ ಜನತೆಯ ಕ್ಷಮೆಯಾಚಿಸಬೇಕು. ಇದನ್ನು ಜನಾಂದೋಲನವಾಗಿ ರೂಪಿಸಲು ಡಿ.ಕೆ.ಶಿವಕುಮಾರ್ ಪ್ರತಿಕೃತಿ ದಹನದ ಮೂಲಕ ಸಾಂಕೇತಿಕವಾಗಿ ಶುರು ಮಾಡಿದ್ದೇವೆ ಎಂದು ಎಚ್ಚರಿಸಿದರು.