ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಒಂದೇ ದಿನ ಹಲವು ಕಡೆ ಹುಸಿ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಕೆಲಕಾಲ ಆತಂಕ ಸೃಷ್ಟಿಯಾಗಿತ್ತು.
ನಿನ್ನೆ ಒಂದೇ ದಿನ ಬೆಂಗಳೂರು, ಮೈಸೂರು, ಹಾಸನ, ಬಾಗಲಕೋಟೆ, ಗದಗ, ಧಾರವಾಡ, ಹಾಸನ ಸೇರಿ 7 ಜಿಲ್ಲೆಗಳಿಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದ್ದಾರೆ.
ಮೈಸೂರು ಹಳೇ ಕೋರ್ಟ್, ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ಹಾಗೂ ಬೆಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಹಾಕಲಾಗಿದೆ. ಗದಗ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಬಂದಿದೆ.
ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಪಾಸ್ ಪೋರ್ಟ್ ಕಚೇರಿ ಹಾಗೂ ಕೋರಮಂಗಲ ಬಳಿಯ ಪಾಸ್ ಪೋರ್ಟ್ ಕಚೇರಿಗೂ ಇಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳಗಳಿಂದ ಪರಿಶೀಲನೆ ನಡೆಸಲಾಗಿದೆ. ಸದ್ಯ ಎಲ್ಲವೂ ಹುಸಿ ಬಾಂಬ್ ಬೆದರಿಕೆ ಎಂಬುದು ಧೃಡವಾಗಿದ್ದು, ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ.




