ಬೆಂಗಳೂರು: ವಿಜಯೇಂದ್ರ ಹಾಗೂ ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್ ಯತ್ನಾಳ್ ರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ ಎಂದು ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ.
ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ ಎಂದು ವಿಜಯೇಂದ್ರ ಹೇಳಿದ್ದಾರೆ.