ತುರುವೇಕೆರೆ: ಕರ್ನಾಟಕ ಸರ್ಕಾರ, ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಕೃಷಿ ಇಲಾಖೆ ವತಿಯಿಂದ ಜನವರಿ 13 ಮತ್ತು 14 ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ಉತ್ಪಾದಕರು ಮತ್ತು ಮಾರುಕಟ್ಟೆದಾರರ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ ಎಂದು ಕೃಷಿ ಸಹಾಯಕ ನಿರ್ದೇಶಕಿ ಪೂಜಾ ತಿಳಿಸಿದರು.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಿರಿಧಾನ್ಯ ಉತ್ಪನ್ನಗಳ ಮಳಿಗೆಗಳು, ತಜ್ಞರ ಉಪನ್ಯಾಸ, ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿರುತ್ತದೆ. ಸಿರಿಧಾನ್ಯಗಳು ಹೆಚ್ಚಿನ ನಾರಿನಾಂಶ, ನಿಧಾನವಾಗಿ ಜೀರ್ಣಿಸುವ ಶರ್ಕರ ಪಿಷ್ಟ, ಗ್ಲುಟೀನ್ ರಹಿತ ಉತ್ತಮ ಜೀವಸತ್ವಗಳನ್ನು ಹೊಂದಿದ್ದು, ದೇಹದಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆಗೊಳಿಸಿ, ಹೃದ್ರೋಗ ಹಾಗೂ ಹೆಚ್ಚಿದ ತೂಕದ ಸಮಸ್ಯೆಯನ್ನು ನಿವಾರಿಸುತ್ತದೆ. ಆದ್ದರಿಂದ ಸಾರ್ವಜನಿಕರು ಸಿರಿಧಾನ್ಯ ಉತ್ಪನ್ನಗಳನ್ನು ಖರೀದಿಸಿ ಉಪಯೋಗಿಸುವುದರ ಮೂಲಕ ತಮ್ಮ ಆರೋಗ್ಯವೃದ್ದಿಯ ಜೊತೆಗೆ ಸಿರಿಧಾನ್ಯ ಉತ್ಪಾದಕರು ಮತ್ತು ಸಿರಿಧಾನ್ಯ ಉತ್ಪನ್ನಗಳ ಉದ್ದಿಮೆದಾರರಿಗೆ ಪ್ರೋತ್ಸಾಹ ನೀಡಬೇಕಾಗಿ ಕೋರಿದರು.
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಉಪಸ್ಥಿತಿಯಲ್ಲಿ ಸಮಾರಂಭವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್, ವಸ್ತು ಪ್ರದರ್ಶನವನ್ನು ಕೃಷಿ ಸಚಿವ ಚಲುವರಾಯಸ್ವಾಮಿ, ಸಿರಿಧಾನ್ಯಗಳ ರಾಶಿಯನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದಾರೆ. ತುಮಕೂರು ನಗರ ಶಾಸಕ ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದು ಜಿಲ್ಲೆಯ ಸಂಸದರು, ಶಾಸಕರು, ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ತಾಲ್ಲೂಕಿನ ರೈತ ಬಾಂಧವರು, ಸಾರ್ವಜನಿಕರು ಹಾಗೂ ಶಾಲಾ ಮಕ್ಕಳು/ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಿರಿಧಾನ್ಯ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದುಪಯೋಗ ಮಾಡಿಕೊಳ್ಳಲು ವಿನಂತಿಸಿದರು.
ವರದಿ: ಗಿರೀಶ್ ಕೆ ಭಟ್