ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಚೈನ್ ತುಂಡಾಗಿ ಗೇಟ್ ಮೂಲಕ ಅಪಾರ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದೆ. ತಡರಾತ್ರಿ 11 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ನದಿ ಪಾತ್ರದ ಜನರಲ್ಲಿ ಭಾರಿ ಆತಂಕ ಸೃಷ್ಟಿಸಿದೆ.
ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗಿ ಅಪಾರ ಪ್ರಮಾಣದ ನೀರು ತುಂಗಭದ್ರಾ ಡ್ಯಾಂಗೆ ಹರಿದು ಡ್ಯಾಮ್ ನಲ್ಲಿ 133 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿದ್ದು, 30 ಟಿಎಂಸಿ ಹೂಳು ತುಂಬಿದ ಹಿನ್ನೆಲೆಯಲ್ಲಿ 100 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿದೆ. ಡ್ಯಾಂ ಭರ್ತಿಯಾಗಿ ಒಳಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಹೆಚ್ಚುವರಿ ನೀರನ್ನು ನದಿಯ ಮೂಲಕ ಹೊರ ಬಿಡಲಾಗುತ್ತಿದೆ.
ಶನಿವಾರ ರಾತ್ರಿ 19ನೇ ಕ್ರಸ್ಟ್ ಗೇಟ್ ಲಿಂಖ್ ಚೈನ್ ತುಂಡಾಗಿ ಬಿದ್ದು 35 ಸಾವಿರ ಕ್ಯೂಸೆಕ್ ಗೂ ಅಧಿಕ ಪ್ರಮಾಣದಲ್ಲಿ ನೀರು ನದಿಗೆ ಹರಿದು ಹೋಗುತ್ತಿದೆ. ಇದರಿಂದಾಗಿ ನದಿ ಪಾತ್ರದಲ್ಲಿ ಭಾರಿ ಆತಂಕ ಸೃಷ್ಟಿಯಾಗಿದೆ.
ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್, ಎಸ್ಪಿ ರಾಮ್ ಎಲ್ ಅರಸಿದ್ದಿ ಸೇರಿದಂತೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಭಾನುವಾರ ಬೆಳಗ್ಗೆ ಬೆಂಗಳೂರಿನಿಂದ ತಜ್ಞರ ತಂಡ ಆಗಮಿಸಿ ನೀರು ಹರಿವು ತಡೆಗೆ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಗೇಟ್ ಗಳ ಮೂಲಕ ಸುಮಾರು 1 ಲಕ್ಷ ಕ್ಯೂಸೆಕ್ ಗೂ ಅಧಿಕ ಪ್ರಮಾಣದ ನೀರು ನದಿಗೆ ಬಿಡಲಾಗಿದ್ದು, ನದಿ ಪಾತ್ರದ ಜನರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ. ಡಂಗುರ ಸಾರಲಾಗಿದೆ.