ಬೆಂಗಳೂರು: ಕನ್ನಡಿಗರಿಗೆ ಕಡ್ಡಾಯ ಉದ್ಯೋಗ ಮೀಸಲಾತಿ ಕಲ್ಪಿಸಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಜುಲೈ 1ರಂದು ರಾಜ್ಯಾದ್ಯಂತ ಕರ್ನಾಟಕ ರಕ್ಷಣಾ ವೇದಿಕೆ ಬೃಹತ್ ಚಳವಳಿಗೆ ಕರೆ ನೀಡಿದೆ.
ವೇದಿಕೆಯ ರಾಜ್ಯಾಧ್ಯಕ್ಷ ಟಿ. ನಾರಾಯಣ ಗೌಡ ಈ ಬಗ್ಗೆ ಹೇಳಿಕೆ ನೀಡಿದ್ದು, ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗ ಎಂಬ ಘೋಷಣೆಯೊಂದಿಗೆ ರಾಜ್ಯಾದ್ಯಂತ ಚಳವಳಿ ಆರಂಭಿಸಲಾಗುವುದು.ಜುಲೈ 1ರಂದು ಬೃಹತ್ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ಬೇರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನಂತಹ ದೊಡ್ಡ ನಗರಗಳಿಗೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದ್ದು, ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಕೊರತೆ ಎದುರಾಗುತ್ತಿದೆ. ಎಲ್ಲಾ ಖಾಸಗಿ ವಲಯದ ಉದ್ಯೋಗಗಳಲ್ಲಿ ಹೊರ ರಾಜ್ಯದವರೆ ಹೆಚ್ಚಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರಗೊಂಡಿದೆ.
ಹೀಗಾಗಿ ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡಲು ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರದ ಮೇಲೆ ಒತ್ತಡ ತರಲಾಗುವುದು ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಸೂಕ್ತ ಕಾನೂನು ರೂಪಿಸಿ ರಾಜ್ಯದ ಎಲ್ಲಾ ಖಾಸಗಿ ಸಂಸ್ಥೆಗಳಲ್ಲಿ ಸಿ ಮತ್ತು ಡಿ ದರ್ಜೆಯ ಶೇಕಡ 100ರಷ್ಟು ಹುದ್ದೆಗಳು, ಇತರೆ ಹುದ್ದೆಗಳಲ್ಲಿ ಶೇಕಡ 80ರಷ್ಟು ಹುದ್ದೆಗಳನ್ನು ಕನ್ನಡಿಗರಿಗೆ ಮೀಸಲಿಡಬೇಕು.
ಕೇಂದ್ರ ಸರ್ಕಾರದ ಇಲಾಖೆಗಳು ಮತ್ತು ಸಾರ್ವಜನಿಕ ವಲಯದ ಸಿ ಮತ್ತು ಡಿ ದರ್ಜೆ ಹುದ್ದೆಗಳಿಗೆ ಶೇಕಡ 100ರಷ್ಟು, ಇತರೆ ದರ್ಜೆಯ ಹುದ್ದೆಗಳಿಗೆ ಶೇಕಡ 90ರಷ್ಟು ಕನ್ನಡಿಗರಿಗೆ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.