ನವದೆಹಲಿ: ಪ್ರತಿಭಟನೆ ವೇಳೆ ಸಂಸದರು ಗಾಯಗೊಂಡ ಬೆನ್ನಲ್ಲೇ ಬಿಜೆಪಿಯವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದಾರೆ. ಇತ್ತ ಕಾಂಗ್ರೆಸ್‌ನವರು ಕೂಡ ಬಿಜೆಪಿ ವಿರುದ್ಧ ದೂರು ದಾಖಲಿಸಿದ್ದಾರೆ.
ಸಂಸತ್ತಿನಲ್ಲಿ ನಡೆದ ಗದ್ದಲಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಂಸದರು ಸಂಸತ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕರಾದ ದಿಗ್ವಿಜಯ್ ಸಿಂಗ್ ಮತ್ತು ಪ್ರಮೋದ್ ತಿವಾರಿ, ಮಲ್ಲಿಕಾರ್ಜುನ ಖರ್ಗೆ ಅವರ ಗಾಯದ ಬಗ್ಗೆ ನಾವು ದೂರು ನೀಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಹರಿಜನರಾಗಿರುವುದರಿಂದ ಹರಿಜನ ಕಾಯ್ದೆಯಡಿಯೇ ಪ್ರಕರಣ ದಾಖಲಿಸಬೇಕೆಂದು ನಾವು ಬಯಸುತ್ತೇವೆ ಎಂದಿದ್ದಾರೆ.
ಅಲ್ಲದೇ ಅಂಬೇಡ್ಕರ್ ಸಾಹೇಬರಿಗೆ ಅವಾಚ್ಯ ಶಬ್ದಗಳನ್ನು ಬಳಸಿದ ರೀತಿಯನ್ನು ವಿರೋಧಿಸುತ್ತೇವೆ. ಈ ಗದ್ದಲದ ಸಮಯದಲ್ಲಿ ಸಂಚು ರೂಪಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.