ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪಿಸಲಾಗಿದ್ದ ಮೂಡ ಪ್ರಾಧಿಕಾರ ಅಕ್ರಮ ನಿವೇಶನ ಹಂಚಿಕೆ ಹಗರಣದ ಬಗ್ಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಸಿಎಂ ವಿರುದ್ದ ಲೋಕಾಯುಕ್ತ ತನಿಖೆಗೆ ಆದೇಶ ನೀಡುವ ಮೂಲಕ ಹೈಕೋರ್ಟ್ ತೀರ್ಪು ಹಾಗೂ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎತ್ತಿ ಹಿಡಿದಿದೆ.
ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಹೈಕೋರ್ಟ್ ಆದೇಶ, ಡಿಯು ಡಾಮನ್ ಸಿಎಂ ಪ್ರಕರಣ ಮುಂತಾದ ಪ್ರಕರಣಗಳನ್ನು ಉಲ್ಲೇಖಿಸಿತು. ಈ ನಡೆಯ ಬಳಿಕ ಸಿಎಂಗೆ ಕಠಿಣ ಕಾನೂನು ಸಂಕಷ್ಟ ಎದುರಾಗಿದೆ.
ಮಂಗಳವಾರ ಈ ಕುರಿತು ವಿಚಾರಣೆ ನಡೆಸಿದ್ದ ಹೈಕೋರ್ಟ್, ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಿರ್ಣಯವನ್ನು ಅಂಗೀಕರಿಸಿತ್ತು. ಜೊತೆಗೆ, ಈ ನಿರ್ಣಯದ ವಿರುದ್ದ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತ್ತು.
ಮೈಸೂರಿನ ವಿಜಯನಗರದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಹೆಸರಿನಲ್ಲಿ 14 ನಿವೇಶನಗಳನ್ನು ಹಂಚಿರುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇದೇ ಅಂಶವನ್ನು ಉಲ್ಲೇಖಿಸಿ ಅರ್ಜಿದಾರರ ಪರ ವಕೀಲರು ವಾದಿಸಿದ್ದರು. ಪರಿಹಾರ ನೀಡಿದ ಬಳಿಕವೂ ಡಿನೋಟಿಫಿಕೇಶನ್ ಮಾಡಲಾಗಿತ್ತು ಎಂಬ ಆರೋಪವೂ ಸಹ ಸಿಎಂ ಕುಟುಂಬದ ಮೇಲಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಹಾಗೂ ಸ್ನೇಹಮಯಿ ಕೃಷ್ಣ ಸಿಎಂ ವಿರುದ್ದ ಕಾನೂನು ಕ್ರಮಕ್ಕೆ ಪ್ರಕರಣ ದಾಖಲಿಸಿದ್ದರು. ಬಳಿಕ ಬಿಜೆಪಿ ಕೂಡ ಪ್ರತ್ಯೇಕವಾಗಿ ಪ್ರಕರಣ ದಾಖಲಿಸಿತ್ತು.