ತುರುವೇಕೆರೆ: ತುಮಕೂರು ಜಿಲ್ಲಾ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಅವಿರೋದವಾಗಿ ಆಯ್ಕೆಯಾಗಿರುವ ಸಿದ್ದಲಿಂಗಪ್ಪ ಅವರನ್ನು ತಾಲ್ಲೂಕಿನ ಸಹಕಾರ ಸಂಘಗಳ ವತಿಯಿಂದ ಅದ್ದೂರಿಯಾಗಿ ಅಭಿನಂದಿಸಲಾಯಿತು. ಪಟ್ಟಣದ ಗ್ರಾಮದೇವತೆ ಶ್ರೀ ಉಡುಸಲಮ್ಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ನೂರಾರು ರೈತರು, ಸಹಕಾರಿ ಬಂಧುಗಳೊಂದಿಗೆ ಮೆರವಣಿಗೆಯಲ್ಲಿ ನೂತನ ನಿರ್ದೇಶಕ ಸಿದ್ದಲಿಂಗಪ್ಪ ಅವರನ್ನು ದಬ್ಬೇಘಟ್ಟ ರಸ್ತೆಯಲ್ಲಿರುವ ಡಿಸಿಸಿ ಬ್ಯಾಂಕ್ ಕಛೇರಿಗೆ ಕರೆತರಲಾಯಿತು. ಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲ್ಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಹಿತೈಷಿಗಳು, ಬೆಂಬಲಿಗರು ಮೈಸೂರು ಪೇಟ ತೊಡಿಸಿ, ಪುಷ್ಪಾಹಾರ ಹಾಕಿ, ಸಿಹಿ ತಿನ್ನಿಸಿ ಅಭಿನಂದಿಸಿದರು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಡಿಸಿಸಿ ಬ್ಯಾಂಕ್ ನಿರ್ದೇಶಕ ಸಿದ್ದಲಿಂಗಪ್ಪ, ಸತತ ಎರಡನೇ ಬಾರಿಗೆ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕಿನ ನಿರ್ದೇಶಕರಾಗಿ ಆಯ್ಕೆ ಮಾಡಿದ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿ ಸಹಕಾರ ಬ್ಯಾಂಕಿನ ಅಧ್ಯಕ್ಷರು, ಪದಾಧಿಕಾರಿಗಳಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮಾಜಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ಕಳೆದ ಬಾರಿ ನಿರ್ದೇಶಕನಾಗಿದ್ದ ಅವಧಿಯಲ್ಲಿ ನನ್ನ ಆತ್ಮಕ್ಕೆ ತೃಪ್ತಿಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸಿದ್ದೇನೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನ ತಂದು ಸಹಕಾರ ಸಂಘದ ಅಭಿವೃದ್ದಿ ಮಾಡಲಾಗುವುದು ಎಂದರು.
ಈ ಬಾರಿಯ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ 14 ಕ್ಷೇತ್ರಗಳಲ್ಲಿ 8 ಕ್ಷೇತ್ರದಲ್ಲಿ ಕೆ.ಎನ್.ರಾಜಣ್ಣನವರ ತಂಡದವರೇ ಅವಿರೋಧ ಆಯ್ಕೆಯಾಗಿದ್ದರು. ಉಳಿದ 6 ಕ್ಷೇತ್ರಗಳಿಗೆ ಚುನಾವಣೆ ನಡೆದು ಅಲ್ಲೂ ಕೆ.ಎನ್.ರಾಜಣ್ಣನವರ ತಂಡವೇ ಜಯಗಳಿಸಿದೆ. ತುರುವೇಕೆರೆ ತಾಲ್ಲೂಕಿನಲ್ಲಿ ಕೆ.ಸಿ.ಸಿ. ಸಾಲ 90 ಕೋಟಿವರೆಗೆ ಸಾಲ ನೀಡಿದ್ದೇವೆ. ಇದಲ್ಲದೆ ವ್ಯಾಪಾರ ಸಾಲ ಮತ್ತು ದೀರ್ಘಾವಧಿ ಸಾಲವನ್ನೂ ನೀಡಲಾಗಿದೆ. ಹುಲ್ಲೇಕೆರೆ ಮತ್ತು ಮಾದಿಹಳ್ಳಿ ಸಹಕಾರ ಸಂಘದಲ್ಲಿನ ಸಮಸ್ಯೆಗಳನ್ನು ಶೀಘ್ರ ಬಗೆಹರಿಯಲಿದ್ದು, ತಪಿತಸ್ಥರಿಗೆ ಶಿಕ್ಷೆಯಾಗಿ ಅವರಿಂದ ಬರಬೇಕಾದ ಹಣವೂ ಸಹ ವಸೂಲಿಯಾಗಲಿದೆ. ಬೇರೆ ಸಹಕಾರ ಸಂಘಗಳಲ್ಲಿ ಯಾವುದೇ ಸಮಸ್ಯೆಯಿಲ್ಲದೆ ಮೊದಲಿಗಿಂತಲೂ ಈಗ ಉತ್ತಮವಾಗಿ ನಡೆಯುತ್ತಿದ್ದು, ಕೆಲವು ಸಂಘಗಳಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಾದ ತರಬೇತಿ ಶಿಬಿರ ನಡೆಸಲಾಗುತ್ತಿದೆ, ರಸಗೊಬ್ಬರ ಸೇರಿದಂತೆ ಅಗತ್ಯ ಪರಿಕರಗಳನ್ನು ನೀಡಲಾಗುತ್ತಿದೆ ಎಂದರು.
ನೂತನ ನಿರ್ದೇಶಕ ಸಿದ್ದಲಿಂಗಪ್ಪ ಅವರನ್ನು ಬಿಜೆಪಿ ಮುಖಂಡ ಸಂತೋಷ್ ಕಂಟ್ಲಿ, ಟೌನ್ ಸಹಕಾರ ಬ್ಯಾಂಕ್ ಅಧ್ಯಕ್ಷ ರಾಮೇಗೌಡ, ಪಪಂ ಸದಸ್ಯರಾದ ಯಜಮಾನ್ ಮಹೇಶ್, ಅಂಜನ್ ಕುಮಾರ್, ನಾಮಿನಿ ಸದಸ್ಯ ರುದ್ರೇಶ್, ತುಮುಲ್ ನಿರ್ದೇಶಕ ಮಹಲಿಂಗಯ್ಯ, ಕೊಡಗೀಹಳ್ಳಿ ಗ್ರಾಪಂ ಅಧ್ಯಕ್ಷ ಕಿರಣ್, ಕೊಡಗೀಹಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷ ಯದುಕುಮಾರ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಪಿ.ರಾಜು, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ನಂಜುಂಡಪ್ಪ, ಕೊಟ್ಟೂರನಕೊಟ್ಟಿಗೆ ಗೋವಿಂದರಾಜು, ಜೋಗಿಪಾಳ್ಯ ಶಿವರಾಜು, ವಕೀಲ ನಾಗೇಶ್, ಹಾವಾಳ ಶಿವಕುಮಾರ್ ಸೇರಿದಂತೆ ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ತಾಲ್ಲೂಕಿನ ಪ್ರಾಥಮಿಕ ಕೃಷಿ ಸಹಕಾರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಅಭಿಮಾನಿಗಳು ಅಭಿನಂದಿಸಿದರು.
ವರದಿ: ಗಿರೀಶ್ ಕೆ ಭಟ್, ತುರುವೇಕೆರೆ




