ಬೆಂಗಳೂರು : ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದು ಹೇಳಿರುವ ಬಿಜೆಪಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದೆ.ಉಪ್ಪು ತಿಂದವರು ನೀರು ಕುಡಿಯಲೇ ಬೇಕು.
ದಲಿತರಿಗೆ ದ್ರೋಹ ಬಗೆದು ಅಕ್ರಮವಾಗಿ ಮುಡಾ ಸೈಟುಗಳನ್ನು ಕಬಳಿಸಿರುವ ಭ್ರಷ್ಟ ಸಿಎಂ ಸಿದ್ದರಾಮಯ್ಯ ನವರೇ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ, ತನಿಖೆ ಎದುರಿಸಿ ಎಂದು ಬಿಜೆಪಿ ಆಗ್ರಹಿಸಿದೆ.
ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ಅತ್ಯಂತ ಸ್ವಾಗತಾರ್ಹ. ದಲಿತರ ಭೂಮಿಯನ್ನು ನುಂಗಿ, ಅಕ್ರಮವಾಗಿ ಅತ್ಯಂತ ಬೆಲೆಬಾಳುವ 14 ಸೈಟುಗಳನ್ನು ಕಬಳಿಸಿರುವ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿಯಲ್ಲಿ ಮುಂದುವರೆಯಲು ಅರ್ಹರಲ್ಲ. ಕೂಡಲೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ತನಿಖೆಗೆ ಒಳಗಾಗಲಿ ಎಂದು ಬಿಜೆಪಿ ಆಗ್ರಹಿಸಿದೆ.
ಗೌರವಾನ್ವಿತ ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದ ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.