ನವದೆಹಲಿ: ಕರ್ನಾಟಕದ ಹೆಮ್ಮೆಯ ವಿಶ್ವವಿದ್ಯಾಲಯಗಳಾದ ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ತೀವ್ರ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿವೆ. ಈ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ಮತ್ತು ಧಾರವಾಡ ವಿಶ್ವವಿದ್ಯಾಲಯಗಳು ದೇಶದ ಶೈಕ್ಷಣಿಕ ಪ್ರಗತಿಗೆ ಅಪಾರ ಕೊಡುಗೆ ನೀಡಿವೆ. ಆದರೆ ಇಂದು ತೀವ್ರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿವೆ.
ಈ ಬಿಕ್ಕಟ್ಟಿನಿಂದಾಗಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಸಮಯಕ್ಕೆ ಸರಿಯಾಗಿ ವೇತನ ನೀಡಲು ಸಹ ವಿಶ್ವವಿದ್ಯಾಲಯಗಳು ಹೆಣಗಾಡುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.
ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಉತ್ತೇಜನ ನೀಡುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ನೆರವು ನೀಡಬೇಕೆಂದು ದೇವೇಗೌಡರು ಒತ್ತಾಯಿಸಿದ್ದಾರೆ.
ಶಿಕ್ಷಣವು ಒಂದು ರಾಷ್ಟ್ರದ ಬೆನ್ನೆಲುಬು. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಶಿಕ್ಷಣ ಸಂಸ್ಥೆಗಳು ಯಾವುದೇ ರೀತಿಯ ಆರ್ಥಿಕ ಕೊರತೆ ಎದುರಿಸದಂತೆ ನೋಡಿಕೊಳ್ಳುವುದು ಅತ್ಯಂತ ಮುಖ್ಯ ಎಂದು ದೇವೇಗೌಡರು ಅಭಿಪ್ರಾಯಪಟ್ಟರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಬೇಕು ಮತ್ತು ಆರ್ಥಿಕವಾಗಿ ಸಂಕಷ್ಟದಲ್ಲಿರುವ ವಿಶ್ವವಿದ್ಯಾಲಯಗಳಿಗೆ ತಕ್ಷಣ ನೆರವು ನೀಡಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.