ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದ 12 ದಿನಗಳ ನಂತರ ಬುಧವಾರ ಮಹಾಯುತಿ ಮೈತ್ರಿಕೂಟ ಸರ್ಕಾರ ರಚನೆಗೆ ಹಕ್ಕು ಮಂಡಿಸಿತು.
ಇಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಸತತ ಮೂರನೇ ಬಾರಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣ ವಚನ ಸಮಾರಂಭಕ್ಕೂ ಮುನ್ನ ದೇವೇಂದ್ರ ಫಡ್ನವೀಸ್ ಅವರು ತಮ್ಮ ತಾಯಿಯಿಂದ ಆಶೀರ್ವಾದ ಪಡೆದರು. ದೇವೇಂದ್ರ ಫಡ್ನವೀಸ್ಗೆ ತಾಯಿ ತಿಲಕ ನೀಡಿ ಆಶೀರ್ವದಿಸಿದರು.
ಮಹಾರಾಷ್ಟ್ರ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎನ್ಡಿಎ ಆಡಳಿತವಿರುವ ರಾಜ್ಯಗಳ ಸಿಎಂಗಳು ಮತ್ತು ಉಪ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು ಮತ್ತು ಎನ್ಡಿಎ ನಾಯಕರು ಉಪಸ್ಥಿತರಿದ್ದರು.
ಜೊತೆಗೆ ಬಾಲಿವುಡ್ ತಾರೆಯರ ಜೊತೆ ಅನೇಕ ಸೆಲೆಬ್ರಿಟಿಗಳು ಭಾಗವಹಿಸುತ್ತಿದ್ದಾರೆ. ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್, ಸಲ್ಮಾನ್ ಖಾನ್ ಸೇರಿದಂತೆ ಹಲವು ತಾರೆಯರು ಆಗಮಿಸಿದ್ದಾರೆ. ಉದ್ಯಮಿ ಮುಖೇಶ್ ಅಂಬಾನಿ ಕೂಡ ಭಾಗವಹಿಸಿದ್ದಾರೆ.