ಬೆಳಗಾವಿ : ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಹಿಳೆಯರಿಗಾಗಿ ಮಕ್ಕಳಿಗೆ ಹಾಲುಣಿಸುವ ಆರೈಕೆ ಕೇಂದ್ರ ತೆರೆಯುವ ಕುರಿತು ಸಲಹೆಯನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.
ವಿಧಾನ ಪರಿಷತ್ತಿನಲ್ಲಿ ಇಂದು ಪರಿಷತ್ ಸದಸ್ಯೆ ಉಮಾಶ್ರೀ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ ಮೆಜೆಸ್ಟಿಕ್, ಯಶವಂತಪುರ ಮೆಟ್ರೋ ನಿಲ್ದಾಣ, ಚಿಕ್ಕಪೇಟೆ ಮೆಟ್ರೋ ನಿಲ್ದಾಣ ಮತ್ತು ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಶಿಶು ಆಹಾರ ಕೇಂದ್ರಗಳು ಇವೆ ಎಂದು ಉತ್ತರಿಸಿದರು.
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಇನ್ನು ಅಂಗವಿಕಲರಿಗೆ ಶೌಚಾಲಯಗಳಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.